ದೇರಳಕಟ್ಟೆ: ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಎನ್ಎಸ್ಎಸ್ ಘಟಕ, ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕೇಂದ್ರ ಸರ್ಕಾರದ ಎನ್ಎಸ್ಎಸ್ ಪ್ರಾದೇಶಿಕ ನಿರ್ದೇಶನಾಲಯದ ಸಹಯೋಗದಲ್ಲಿ “5K ಮತ್ತು 10K ಎನ್ಎಸ್ಎಸ್ ಮ್ಯಾರಥಾನ್” ಕಾರ್ಯಕ್ರಮವು ಕೆ.ಎಸ್. ಹೆಗ್ಡೆ ಆಡಿಟೋರಿಯಂ ಮುಂಭಾಗದಲ್ಲಿ ಯಶಸ್ವಿಯಾಗಿ ನಡೆಯಿತು.
ಬೆಂಗಳೂರುದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ. ಬಿ. ದಿನೇಶ ಮ್ಯಾರಥಾನ್ಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಇಂದಿನ ಒತ್ತಡದ ಜೀವನದಲ್ಲಿ ದೈಹಿಕ ಚಟುವಟಿಕೆಗಳ ಮಹತ್ವವನ್ನು ಒತ್ತಿಹೇಳಿ, ಮ್ಯಾರಥಾನ್ಗಳಂತಹ ಕ್ರೀಡೆಗಳು ದೈಹಿಕ ಸಾಮರ್ಥ್ಯ ಮಾತ್ರವಲ್ಲ, ಮಾನಸಿಕ ಶಿಸ್ತನ್ನೂ ಹೆಚ್ಚಿಸುತ್ತವೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶಾಲ್ ಹೆಗ್ಡೆ ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಡಾ. ಎಂ. ಶಾಂತಾರಾಮ್ ಶೆಟ್ಟಿ ಮಾತನಾಡಿ, ನಿಟ್ಟೆ ಸಂಸ್ಥೆ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಒತ್ತು ನೀಡುತ್ತಿದ್ದು, ಇಂತಹ ಕಾರ್ಯಕ್ರಮಗಳು ಸಮುದಾಯದ ಆರೋಗ್ಯ ಮತ್ತು ಏಕತೆಯನ್ನು ಪ್ರತಿಬಿಂಬಿಸುತ್ತವೆ ಎಂದರು.
ಈ ಸಂದರ್ಭದಲ್ಲಿ ಎನ್ಎಸ್ಎಸ್ ಪ್ರಾದೇಶಿಕ ನಿರ್ದೇಶಕ ಗಿರಿಧರ್ ಉಪಾಧ್ಯಾಯ ಮತ್ತು ರಾಜ್ಯ ಎನ್ಎಸ್ಎಸ್ ಅಧಿಕಾರಿ ಡಾ. ಪ್ರತಾಪ್ ಲಿಂಗಯ್ಯ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಎನ್ಎಸ್ಎಸ್ ಸಂಯೋಜಕ ಶಶಿ ಕುಮಾರ್ ಶೆಟ್ಟಿ, ಡೀನ್ ಪ್ರೊ ಡಾ. ಜಯಪ್ರಕಾಶ್ ಶೆಟ್ಟಿ, ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳಾದ ಪ್ರತಿಮಾ ರೈ, ಅಂಶ್ಯಾ ರೈ ಹಾಗೂ ಡಾ. ವರ್ಷಾ ಶೆಟ್ಟಿ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
162ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳ ಸುಮಾರು 1700 ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಮ್ಯಾರಥಾನ್ನಲ್ಲಿ ಭಾಗವಹಿಸಿದರು. ಗೋವಾ ಮೂಲದ ಅಂಗವೈಕಲ್ಯ ಹೊಂದಿರುವ ವಿವೇಕ್ ಸಿಂಗ್ ಅವರ ಭಾಗವಹಿಸುವಿಕೆ ವಿಶೇಷ ಗಮನ ಸೆಳೆಯಿತು.