ಮಂಗಳೂರು, ಮೇ 12: ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ.
ಕರಾವಳಿ ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ತಗ್ಗು ಪ್ರದೇಶದ ನಿವಾಸಿಗಳು, ಮೀನುಗಾರರು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ಇರಬೇಕೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನೊಂದೆಡೆ, ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ದಾವಣಗೆರೆ ಜಿಲ್ಲೆಗಳಲ್ಲೂ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.
ಮೇ 15 ಮತ್ತು 16ರಂದು ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದ್ದು, ಕೆಲವೆಡೆ 64.5 ಮಿ.ಮೀ ರಿಂದ 115.5 ಮಿ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.