ಆ.21ರಿಂದ ‘ಸಮಾಧಾನ ಸಮಾರೋಹ್-2026’ ವಿಶೇಷ ಲೋಕ ಅದಾಲತ್

ಮಂಗಳೂರು:ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ರಾಜಿ ಸಂಧಾನ ಮಾಡಿಕೊಳ್ಳಬಹುದಾದ ಪ್ರಕರಣಗಳನ್ನು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿಯೇ ಇತ್ಯರ್ಥಪಡಿಸುವ ಉದ್ದೇಶದಿಂದ ಆ.21ರಿಂದ 23ರವರೆಗೆ ‘ಸಮಾಧಾನ ಸಮಾರೋಹ್-2026’ ಹೆಸರಿನಲ್ಲಿ ವಿಶೇಷ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ ತಿಳಿಸಿದ್ದಾರೆ.

ಮಂಗಳವಾರ ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ 43 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು. ಅಗತ್ಯವಿದ್ದರೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುವ ವಿಶೇಷ ಲೋಕ ಅದಾಲತ್‌ಗೆ ಸಂಪರ್ಕ ಸಾಧಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು ಎಂದು ತಿಳಿಸಿದರು.

ಸುಪ್ರೀಂ ಕೋರ್ಟ್‌ನಲ್ಲಿ ಇರುವ ಪ್ರಕರಣಗಳ ರಾಜಿ ಸಂಧಾನ ಕುರಿತು ಯಾವುದೇ ಅನುಮಾನಗಳಿದ್ದಲ್ಲಿ ಸಂಬಂಧಪಟ್ಟ ತಾಲೂಕು ಕಾನೂನು ಸೇವಾ ಸಮಿತಿ ಅಥವಾ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವನ್ನು ಸಂಪರ್ಕಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು.

ಚೆಕ್ ಬೌನ್ಸ್ ಪ್ರಕರಣಗಳ ವಿಲೇವಾರಿ

ದೇಶಾದ್ಯಂತ ಚೆಕ್ ಬೌನ್ಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ, ಜುಲೈ 18 ಹಾಗೂ ನವೆಂಬರ್ 21ರಂದು ಚೆಕ್ ಬೌನ್ಸ್ ಪ್ರಕರಣಗಳ ವಿಲೇವಾರಿಗಾಗಿ ವಿಶೇಷ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಹೇಳಿದರು. ಜಿಲ್ಲೆಯಲ್ಲಿ 13,357 ಚೆಕ್ ಬೌನ್ಸ್ ಪ್ರಕರಣಗಳು ಬಾಕಿ ಇದ್ದು, ರಾಜಿ ಸಂಧಾನದ ಮೂಲಕ ಬಗೆಹರಿಸಬಹುದಾದ ಪ್ರಕರಣಗಳನ್ನು ಆಯ್ಕೆ ಮಾಡಿ ಇತ್ಯರ್ಥಪಡಿಸಲಾಗುವುದು ಎಂದು ಮಾಹಿತಿ ನೀಡಿದರು.

ಜುಲೈ 11ರಂದು ರಾಷ್ಟ್ರೀಯ ಲೋಕ ಅದಾಲತ್

ಜುಲೈ 11ರಂದು ವರ್ಷದ ಎರಡನೇ ರಾಷ್ಟ್ರೀಯ ಲೋಕ ಅದಾಲತ್ ಜಿಲ್ಲೆ ಹಾಗೂ ತಾಲೂಕು ನ್ಯಾಯಾಲಯಗಳಲ್ಲಿ ನಡೆಯಲಿದೆ. ಮೋಟಾರು ವಾಹನ ಕಾಯ್ದೆ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಅಕ್ರಮ ಮರಳು ಮಾರಾಟ ಹಾಗೂ ಸಾಗಾಟ ಪ್ರಕರಣಗಳು, ಕಾರ್ಮಿಕ ನಷ್ಟ ಪರಿಹಾರ, ವಿದ್ಯುತ್ ಮತ್ತು ನೀರಿನ ಶುಲ್ಕ ವಿವಾದಗಳು, ವೇತನ ಭತ್ಯೆ, ಪಿಂಚಣಿ ವಿವಾದ ಸೇರಿದಂತೆ ರಾಜಿ ಮಾಡಿಕೊಳ್ಳಬಹುದಾದ ವಿವಿಧ ಪ್ರಕರಣಗಳನ್ನು ಲೋಕ ಅದಾಲತ್‌ನಲ್ಲಿ ಪರಿಗಣಿಸಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಏಪ್ರಿಲ್ ಅಂತ್ಯದ ವೇಳೆಗೆ 55,335 ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇರುವುದಾಗಿ ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನೀಸಾ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!