ಮೇ 17ರಿಂದ ಕದ್ರಿ ಉದ್ಯಾನವನದಲ್ಲಿ ರಾಜ್ಯ ಮಟ್ಟದ ಗೇರು ಮೇಳ …! ವೀಕ್ಷಣೆಗೆ ಬರುವ ಸಾರ್ವಜನಿಕರಿಗೆ ಉಚಿತ ಗೇರು ಗಿಡ ….. ?

ಮಂಗಳೂರು:ಕರ್ನಾಟಕ ಗೇರು ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಕರ್ನಾಟಕ ಅರಣ್ಯ ಇಲಾಖೆ ಸಹಯೋಗದಲ್ಲಿ ‘ಕರ್ನಾಟಕ ಗೇರು ಮೇಳ ಮತ್ತು ಕಾರ್ಯಾಗಾರ-2026’ ಮೇ 17 ಮತ್ತು 18ರಂದು ನಗರದ ಕದ್ರಿ ಉದ್ಯಾನವನದಲ್ಲಿ ನಡೆಯಲಿದ್ದು ಮೇಳ ವೀಕ್ಷಣೆಗೆ ಬಂದ ಅಗತ್ಯ ಇರುವ ಸಾರ್ವಜನಿಕರಿಗೆ ಉಚಿತವಾಗಿ ಗೇರು ಗಿಡ ವಿತರಿಸಲಾಗುದೆಂದು ನಿಗಮದ ಅಧ್ಯಕ್ಷೆ ಮಮತಾ ಡಿ. ಗಟ್ಟಿ ತಿಳಿಸಿದರು.

ತಮ್ಮ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 17ರಂದು ಬೆಳಿಗ್ಗೆ 11 ಗಂಟೆಗೆ ಸ್ಪೀಕರ್ ಯು.ಟಿ. ಖಾದರ್ ಗೇರು ಮೇಳವನ್ನು ಉದ್ಘಾಟಿಸಲಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ರಾಜ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ್ ಬಿ. ಖಂಡ್ರೆ ಸಮಾರಂಭ ಉದ್ಘಾಟಿಸಲಿದ್ದಾರೆ.

ಈ ಸಂದರ್ಭದಲ್ಲಿ ಶಾಸಕರಾದ ಡಿ. ವೇದವ್ಯಾಸ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ರಾಜ್ಯಸಭಾ ಸದಸ್ಯ ಡಿ. ವೀರೇಂದ್ರ ಹೆಗ್ಗಡೆ ಮತ್ತು ಗೇರು ಮೇಳದ ನಿಗಮ ಮಂಡಳಿಯ ಅಧ್ಯಕ್ಷರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು .

ಮೇ 17 ಮತ್ತು 18ರಂದು ಗೇರು ಕೃಷಿ ಕುರಿತು ತಾಂತ್ರಿಕ ಕಾರ್ಯಾಗಾರಗಳು ನಡೆಯಲಿವೆ. ಗೇರು ಸಂಶೋಧನಾ ನಿರ್ದೇಶನಾಲಯದ ಪ್ರಧಾನ ವಿಜ್ಞಾನಿ ಡಾ. ಜಿ. ದಿನಕರ ಉಳ್ಳಾಳ್ ಹಾಗೂ ಹಿರಿಯ ವಿಜ್ಞಾನಿ ಡಾ. ವೀಣಾ ಜಿ.ಎಲ್. ಆಧುನಿಕ ತಂತ್ರಜ್ಞಾನ, ಗೇರು ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಕುರಿತು ಮಾಹಿತಿ ನೀಡಲಿದ್ದಾರೆ. ಪ್ರಗತಿಪರ ರೈತ ಸುಭಾಷ್ ರೈ ಗೇರು ಕೃಷಿಯ ಅನುಭವ ಹಂಚಿಕೊಳ್ಳಲಿದ್ದಾರೆ.

ಮೇ 18ರಂದು ನಡೆಯುವ ತಾಂತ್ರಿಕ ಅಧಿವೇಶನದಲ್ಲಿ ಕೆಸಿಎಂಡಿ ಮಾಜಿ ಅಧ್ಯಕ್ಷ ಪ್ರಕಾಶ್ ಕಲ್ಬಾವಿ ‘ರಾಜ್ಯ ಮಟ್ಟದ ಗೇರು ಮೇಳ’ ಕುರಿತು ವಿಚಾರ ಮಂಡನೆ ಮಾಡಲಿದ್ದಾರೆ. ಹುಬ್ಬಳ್ಳಿಯ ಗೇರು ಮತ್ತು ಕೋಕೋ ನಿರ್ದೇಶನಾಲಯದ ಮಾಜಿ ನಿರ್ದೇಶಕ ಡಾ. ವೆಂಕಟೇಶ್ ಎನ್. ಹುಬ್ಬಳ್ಳಿ ಹಾಗೂ ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಸಂಯೋಜಕ ಡಾ. ಸಿ. ಸುನಿಲ್ ಯೋಜನೆಗಳು ಹಾಗೂ ನರ್ಸರಿಗಳ ಮಾನ್ಯತೆ ಕುರಿತು ರೈತರಿಗೆ ಮಾಹಿತಿ ನೀಡಲಿದ್ದಾರೆ.

ಗೇರು ಬೆಳೆಯಲ್ಲಿ ಗಮನಾರ್ಹ ಸಾಧನೆ ಮಾಡಿದ ಪ್ರಗತಿಪರ ರೈತರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು .

ಸಾರ್ವಜನಿಕರು ಹಾಗೂ ರೈತರಿಗೆ ಮೇಳದಲ್ಲಿ ಉಚಿತ ಪ್ರವೇಶವಿದ್ದು, ರೈತರ ಉತ್ಪನ್ನಗಳಿಗೆ ನೇರ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ 70ಕ್ಕೂ ಹೆಚ್ಚು ಉಚಿತ ಮಾರಾಟ ಮಳಿಗೆಗಳನ್ನು ತೆರೆಯಲಾಗುತ್ತಿದೆ. ವಿದ್ಯಾರ್ಥಿಗಳಿಗಾಗಿ ಭಾಷಣ ಹಾಗೂ ಚಿತ್ರಕಲಾ ಸ್ಪರ್ಧೆ, ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಮೇಳಕ್ಕೆ ಆಗಮಿಸುವ ಸಾರ್ವಜನಿಕರಿಗೆ ಉಚಿತವಾಗಿ ಗೇರು ಹಣ್ಣಿನ ಜ್ಯೂಸ್ ವಿತರಿಸಲಾಗುವುದು ಎಂದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!