ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ವಿವಿಧ ಭಾಗಗಳಲ್ಲಿ ಬೇಸಿಗೆ ಮಳೆ ತೀವ್ರಗೊಂಡಿದ್ದು, ಉತ್ತರ ಕರ್ನಾಟಕ ಹಾಗೂ ಮಲೆನಾಡು ಪ್ರದೇಶಗಳಲ್ಲಿ ವರುಣನ ಆರ್ಭಟ ಹೆಚ್ಚಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಮೈಸೂರು ಸುತ್ತಮುತ್ತಲಿನ ಜಿಲ್ಲೆಗಳು ಹಾಗೂ ಮಲೆನಾಡು ಪ್ರದೇಶಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಸಿನ ಮಳೆಯಾಗುವ ನಿರೀಕ್ಷೆಯಿದೆ.
ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಮೇ 19ರಿಂದ 21ರವರೆಗೆ ಗುಡುಗು ಮತ್ತು ಬಿರುಗಾಳಿ ಸಹಿತ ಸಾಧಾರಣದಿಂದ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಕರಾವಳಿ ತೀರ ಪ್ರದೇಶಗಳಲ್ಲಿ ಗಾಳಿಯ ವೇಗ ಹೆಚ್ಚಾಗಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಹಾಗೂ ಮೀನುಗಾರರು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಸೂಚಿಸಲಾಗಿದೆ.
ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇದ್ದು, ಜಿಲ್ಲಾಡಳಿತಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.