ಮಂಗಳೂರು ಮಹಾನಗರ ಪಾಲಿಕೆಯ 53ನೇ ಬಜಾಲ್ ವಾರ್ಡಿನ ಮೈರ ಜಯನಗರ–ವನರಕ್ತೇಶ್ವರಿ ದೇವಸ್ಥಾನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಗುದ್ದಲಿ ಪೂಜೆ ನೆರವೇರಿತು.
ಸುಮಾರು ₹50 ಲಕ್ಷ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಸ್ಥಳೀಯ ನಿವಾಸಿಗಳು ಹಾಗೂ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಕಾಮಗಾರಿಗೆ ₹50 ಲಕ್ಷ ಅನುದಾನ ಮಂಜೂರಾಗಿತ್ತು. ಬಳಿಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕಾಮಗಾರಿಗೆ ತಡೆ ನೀಡಿತ್ತು ಎಂದು ಆರೋಪಿಸಿದರು.
ನಂತರ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಮಾಡಿದ ಪರಿಣಾಮ ಸ್ಥಗಿತಗೊಂಡಿದ್ದ ಅನುದಾನ ಬಿಡುಗಡೆಯಾಗಿದ್ದು, ಶೀಘ್ರದಲ್ಲೇ ರಸ್ತೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಚಂದ್ರಶೇಖರ ಬಜಾಲ್, ನವೀನ್, ಪ್ರವೀಣ್, ಸುಕೇಶ್, ಶಿವಾಜಿ ರಾವ್, ಯಶವಂತ ಶೆಟ್ಟಿ, ವಿಜಯ್ ಕುಮಾರ್, ಸೀತಾರಾಮ, ದಿನೇಶ್ ಭಟ್, ಗಣಪತಿ ಭಟ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.