ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಬೀದಿಬದಿ ವ್ಯಾಪಾರಿಗಳನ್ನು ಹಾಗೂ ಅವರ ಸಂಘವನ್ನು ಅವಮಾನಿಸಿ, ಸುಳ್ಳು ಆರೋಪಗಳನ್ನು ಹೊರಿಸಲಾಗುತ್ತಿದೆ. ಬಡ ಬೀದಿಬದಿ ವ್ಯಾಪಾರಿಗಳ ಮೇಲೆ ನೈತಿಕ ಪೊಲೀಸ್ಗಿರಿ ನಡೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಆಗ್ರಹಿಸಿದೆ.
ನಗರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಗೌರವಾಧ್ಯಕ್ಷ ಬಿ.ಕೆ. ಇಮ್ತಿಯಾಝ್, ನಗರದ ವಿವಿಧೆಡೆ ಬೀದಿಬದಿ ವ್ಯಾಪಾರ ನಡೆಸುತ್ತಿರುವ ವ್ಯಾಪಾರಿಗಳ ವಿರುದ್ಧ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದು, ಅವರನ್ನು ಅಪರಾಧಿಗಳಂತೆ ಬಿಂಬಿಸುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ಇಂತಹ ಕೃತ್ಯಗಳಿಂದ ವ್ಯಾಪಾರಿಗಳಲ್ಲಿ ಹಾಗೂ ಸಾರ್ವಜನಿಕರಲ್ಲಿ ಆತಂಕ ಮತ್ತು ಅಪನಂಬಿಕೆ ಮೂಡಿಸಲಾಗುತ್ತಿದೆ. ಅಲ್ಲದೆ, ಪ್ರದೇಶಾಂಧತೆಯನ್ನು ಉತ್ತೇಜಿಸಿ ಸಮಾಜದಲ್ಲಿ ಭಿನ್ನಾಭಿಪ್ರಾಯ ಸೃಷ್ಟಿಸುವ ಪ್ರಯತ್ನವೂ ನಡೆಯುತ್ತಿದೆ. ಆದ್ದರಿಂದ ಇಂತಹ ದುಷ್ಕೃತ್ಯ ಎಸಗುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಸಂಘದ ಕಾರ್ಯಾಧ್ಯಕ್ಷ ಸುನಿಲ್ ಕುಮಾರ್ ಬಜಾಲ್ ಮಾತನಾಡಿ, ಬೀದಿಬದಿ ವ್ಯಾಪಾರಿಗಳ ಜೀವನೋಪಾಯ ಸಂರಕ್ಷಣೆ ಮತ್ತು ನಿಯಂತ್ರಣ ಕಾಯ್ದೆ-2014 ಹಾಗೂ ಕರ್ನಾಟಕ ಬೀದಿ ವ್ಯಾಪಾರ ನಿಯಮಗಳು-2019ರ ಪ್ರಕಾರ ವ್ಯಾಪಾರಿಗಳಿಗೆ ಪ್ರಮಾಣಪತ್ರ ಮತ್ತು ಗುರುತಿನ ಚೀಟಿ ವಿತರಿಸುವ ಜವಾಬ್ದಾರಿ ನಗರಪಾಲಿಕೆಯ ಪಟ್ಟಣ ವ್ಯಾಪಾರ ಸಮಿತಿಯದ್ದಾಗಿದೆ ಎಂದರು.
ಬೀದಿಬದಿ ವ್ಯಾಪಾರಿಗಳಿಗೆ ಸ್ವತಃ ಅರ್ಜಿ ಸಲ್ಲಿಸಿ ಪ್ರಮಾಣಪತ್ರ ಅಥವಾ ಗುರುತಿನ ಚೀಟಿ ಪಡೆಯುವ ಅವಕಾಶ ಇಲ್ಲ. ಸಮೀಕ್ಷೆ ನಡೆಸಿ ಅರ್ಹ ವ್ಯಾಪಾರಿಗಳಿಗೆ ಪ್ರಮಾಣಪತ್ರ ಮತ್ತು ಗುರುತಿನ ಚೀಟಿಗಳನ್ನು ವಿತರಿಸಬೇಕಾಗಿದ್ದ ನಗರಪಾಲಿಕೆ ಈ ಪ್ರಕ್ರಿಯೆಯನ್ನು ಸಮರ್ಪಕವಾಗಿ ಜಾರಿಗೊಳಿಸಿಲ್ಲ. ಅಧಿಕಾರಿಗಳ ವೈಫಲ್ಯವನ್ನು ಬಡ ವ್ಯಾಪಾರಿಗಳ ಮೇಲೆ ಹೊರಿಸಿ ಅವರನ್ನು ಅಪರಾಧಿಗಳಂತೆ ಚಿತ್ರಿಸುವುದು ಸರಿಯಲ್ಲ ಎಂದು ಅವರು ಪ್ರಶ್ನಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಮುಝಾಫರ್ ಅಹ್ಮದ್, ಪ್ರಧಾನ ಕಾರ್ಯದರ್ಶಿ ಸಂತೋಷ್ ಆರ್.ಎಸ್., ಉಪಾಧ್ಯಕ್ಷರಾದ ಎಂ.ಎನ್. ಶಿವಪ್ಪ ಹಾಗೂ ವಿಜಯ ಜೈನ್, ಕೋಶಾಧಿಕಾರಿ ಹಂಝ ಮುಹಮ್ಮದ್, ಅಬ್ದುಲ್ ಖಾದರ್, ಗುಡ್ಡಪ್ಪ ಸೇರಿದಂತೆ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.