ಪಂಚಾಯತ್ ರಾಜ್ ಬಲಪಡಿಸಿದ್ದು ಕಾಂಗ್ರೆಸ್; ದುರ್ಬಲಗೊಳಿಸಲು ಬಿಜೆಪಿ ಯತ್ನ: ಮಾಜಿ ಸಚಿವ ರಮಾನಾಥ ರೈ

ಬಂಟ್ವಾಳ: ಅಧಿಕಾರ ವಿಕೇಂದ್ರೀಕರಣದ ಉದ್ದೇಶದಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮಂಡಿಸಿದ್ದ ಪಂಚಾಯತ್ ರಾಜ್ ತಿದ್ದುಪಡಿ ಕಾಯ್ದೆಗೆ ಬಿಜೆಪಿ ಅಡ್ಡಿಪಡಿಸಿತ್ತು. ಬಳಿಕ ಕಾಂಗ್ರೆಸ್ ಆಡಳಿತಾವಧಿಯಲ್ಲೇ ಪಂಚಾಯತ್ ರಾಜ್ ವ್ಯವಸ್ಥೆ ಅನುಷ್ಠಾನಗೊಂಡಿದ್ದು, ಗ್ರಾಮೀಣ ಜನರಿಗೆ ಅಧಿಕಾರ ಹಂಚಿಕೆಯಲ್ಲಿ ಕಾಂಗ್ರೆಸ್ ಮಹತ್ವದ ಪಾತ್ರ ವಹಿಸಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಮಾವೇಶದಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ಸರ್ವ ಶಿಕ್ಷಣ ಅಭಿಯಾನ, ಗ್ರಾಮೀಣ ರಸ್ತೆ ಅಭಿವೃದ್ಧಿ, ಕುಡಿಯುವ ನೀರಿನ ಯೋಜನೆ, ಆಹಾರ ಭದ್ರತಾ ಕಾಯ್ದೆ, ಮಾಹಿತಿ ಹಕ್ಕು ಕಾಯ್ದೆ ಸೇರಿದಂತೆ ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದು ದುರ್ಬಲ ವರ್ಗಗಳ ಸಬಲೀಕರಣಕ್ಕೆ ನೆರವಾಗಿದೆ ಎಂದು ಹೇಳಿದರು.

ಬಿಜೆಪಿ ನಾಯಕರು ಸುಳ್ಳು ಪ್ರಚಾರವನ್ನೇ ಬಂಡವಾಳ ಮಾಡಿಕೊಂಡಿದ್ದಾರೆ. ಪಂಚಾಯತ್ ರಾಜ್ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಮೂಲಕ ಪ್ರಜಾಪ್ರಭುತ್ವದ ಮೂಲ ಆಶಯಗಳಿಗೆ ಧಕ್ಕೆ ತರುತ್ತಿದ್ದಾರೆ ಎಂದು ಆರೋಪಿಸಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜನಪರ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಿದ್ದು, ಬಂಟ್ವಾಳ ಕ್ಷೇತ್ರದಲ್ಲಿಯೇ ಸುಮಾರು 5,000 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳು ನಡೆದಿವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಸುಧೀರ್ ಕುಮಾರ್ ಮರೋಳಿ, ಕೇಂದ್ರದ ಬಿಜೆಪಿ ಸರ್ಕಾರದ ನೀತಿಗಳಿಂದ ಬಡ ಹಾಗೂ ಮಧ್ಯಮ ವರ್ಗದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ನೀಟ್ ಪರೀಕ್ಷೆಯ ನಿರ್ವಹಣೆ ಕುರಿತು ಉದ್ಭವಿಸಿರುವ ಪ್ರಶ್ನೆಗಳು ಶಿಕ್ಷಣ ವ್ಯವಸ್ಥೆಯ ಮೇಲಿನ ವಿಶ್ವಾಸಕ್ಕೆ ಧಕ್ಕೆ ತಂದಿದ್ದು, ಕೇಂದ್ರ ಶಿಕ್ಷಣ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ ತಾಂತ್ರಿಕ ಲೋಪಗಳಿಂದ ಅರ್ಹ ಮತದಾರರ ಹೆಸರುಗಳು ಕೈಬಿಡುವ ಸಾಧ್ಯತೆ ಇದೆ ಎಂದು ಅವರು ಆತಂಕ ವ್ಯಕ್ತಪಡಿಸಿ, ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣೆಯ ಮರು ಮತ ಎಣಿಕೆಯಲ್ಲಿ ಮತ ಡಕಾಯಿತಿ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಎಸ್. ಗಟ್ಟಿ, ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಾಲೆಟ್ ಪಿಂಟೋ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್ ಮಾತನಾಡಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಚಂದ್ರಪ್ರಕಾಶ್ ಶೆಟ್ಟಿ, ಅಶ್ವನಿ ಕುಮಾರ್ ರೈ, ಬಿ. ಪದ್ಮಶೇಖರ್ ಜೈನ್, ಪಿ.ಪಿ. ವರ್ಗೀಸ್, ಶಾಹುಲ್ ಹಮೀದ್, ಸರ್ವೋತ್ತಮ ಗೌಡ ನೆಲ್ಯಾಡಿ, ದಿನೇಶ್ ಮೂಳೂರು, ಚಂದ್ರಶೇಖರ ಭಂಡಾರಿ, ಬಾಲಕೃಷ್ಣ ಅಂಚನ್, ಅರುಣ್ ಕುಮಾರ್ ಶೆಟ್ಟಿ, ಪದ್ಮನಾಭ ಸಾಲ್ಯಾನ್, ರಾಧಾಕೃಷ್ಣ ಬೊಲ್ಲೂರು, ಅಭಿಲಾಷ್ ಪಿ.ಕೆ., ಪ್ರಶಾಂತ್ ಕಾಜವ, ರಮೇಶ್ ಶೆಟ್ಟಿ, ಕುಮಾರಿ ಅಪ್ಪಿ, ಉಷಾ ಅಂಚನ್, ಜಯಂತಿ ಪೂಜಾರಿ, ಸುಧೀರ್ ಕುಮಾರ್ ಶೆಟ್ಟಿ, ಐಡಾ ಸುರೇಶ್, ಶೈಲಜಾ ರಾಜೇಶ್ ಹಾಗೂ ಅಬ್ದುಲ್ ರಹಿಮಾನ್,ಅಡ್ವಕೇಟ್ ಉಮ್ಮರ್ ಕೊಡಂಗೆ ಉಪಸ್ಥಿತರಿದ್ದರು.

ಜಗದೀಶ್ ಕೊಯಿಲ ಸ್ವಾಗತಿಸಿದರು. ಕುಳಾಲು ಸುಭಾಷ್ಚಂದ್ರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವೃಂದಾ ಪೂಜಾರಿ ವಂದಿಸಿದರು. ಅಬ್ದುಲ್ ರಝಾಕ್ ಕುಕ್ಕಾಜೆ ಕಾರ್ಯಕ್ರಮ ನಿರೂಪಿಸಿದರು.
ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳ ಬಲವರ್ಧನೆಗೆ ಸಂಬಂಧಿಸಿದ ಬೇಡಿಕೆಗಳ ಕುರಿತು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ಕುಳಾಲು ಸುಭಾಷ್ಚಂದ್ರ ಶೆಟ್ಟಿ ಅವರ ನೇತೃತ್ವದಲ್ಲಿ ತಹಶೀಲ್ದಾರ್ ಮುಖಾಂತರ ಸಂಬಂಧಪಟ್ಟ ಇಲಾಖೆಗೆ ಮನವಿ ಸಲ್ಲಿಸಲಾಯಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!