ಮಂಗಳೂರು, ಜೂನ್ 8: ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಬರುವ ರೋಗಿಗಳಿಗೆ ಗುಣಮಟ್ಟದ ಆರೋಗ್ಯ ಸೇವೆ ದೊರೆಯುವಂತೆ ಮಾಡುವುದು ತನ್ನ ಮೊದಲ ಆದ್ಯತೆಯಾಗಿದ್ದು, ಆಸ್ಪತ್ರೆಗಳಲ್ಲಿರುವ ಲೋಪದೋಷಗಳನ್ನು ಗುರುತಿಸಿ ಸರಿಪಡಿಸಲು ವಿಶೇಷ ಗಮನ ಹರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ರಾಜ್ಯದ ನೂತನ ಆರೋಗ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಭೇಟಿ ನೀಡಿದ ಅವರು, ಶ್ರೀಕ್ಷೇತ್ರ ಕುದ್ರೋಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯದಲ್ಲಿ ಹಿಂದಿನ ಆರೋಗ್ಯ ಸಚಿವರು ಆರಂಭಿಸಿರುವ ಯೋಜನೆಗಳನ್ನು ಮುಂದುವರಿಸಲಾಗುವುದು. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು, ಸಿಬ್ಬಂದಿ, ಮೂಲಸೌಕರ್ಯ, ಸ್ವಚ್ಛತೆ ಹಾಗೂ ಸೇವೆಗಳ ಬಗ್ಗೆ ಪರಿಶೀಲನೆ ನಡೆಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಹೇಳಿದರು.
“ಆಸ್ಪತ್ರೆಗಳ ನೈಜ ಸ್ಥಿತಿ ತಿಳಿಯಬೇಕಾದರೆ ಮಧ್ಯರಾತ್ರಿ ಭೇಟಿ ನೀಡಬೇಕು. ಈಗಾಗಲೇ ಬೆಂಗಳೂರಿನಲ್ಲಿ ಇಲಾಖೆಯ ಮೊದಲ ಸಭೆ ನಡೆಸಿದ್ದು, ಸೋಮವಾರ ಮಂಗಳೂರಿನಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಜಿಲ್ಲೆಯ ಸಮಸ್ಯೆಗಳ ಕುರಿತು ಚರ್ಚಿಸಲಾಗುವುದು” ಎಂದು ತಿಳಿಸಿದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇರುವ ಕಡೆಗಳಲ್ಲಿ ಮೆಡಿಕಲ್ ಕಾಲೇಜುಗಳ ವೈದ್ಯರ ನೆರವು ಪಡೆಯಲಾಗುವುದು. ಜನರಿಗೆ ಉಚಿತ ಮತ್ತು ಗುಣಮಟ್ಟದ ಚಿಕಿತ್ಸೆ ಸಿಗುವುದೇ ಮುಖ್ಯ ಉದ್ದೇಶ ಎಂದು ಅವರು ಹೇಳಿದರು.
ಉಳ್ಳಾಲ ಆಸ್ಪತ್ರೆಯ ಉದಾಹರಣೆ ನೀಡಿದ ಸಚಿವರು, ಹಿಂದೆ ವೈದ್ಯರ ಕೊರತೆಯಿಂದ ಸಮಸ್ಯೆ ಎದುರಿಸುತ್ತಿದ್ದ ಆಸ್ಪತ್ರೆಯಲ್ಲಿ ಸೂಕ್ತ ಕ್ರಮಗಳಿಂದ ಈಗ ಎಲ್ಲಾ ಸೌಲಭ್ಯಗಳು ಲಭ್ಯವಾಗಿವೆ ಎಂದು ಹೇಳಿದರು.
ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ಜಯರಾಜ್ ಎಚ್. ಸೋಮಸುಂದರಂ, ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.