ನಿರ್ಲಕ್ಷ್ಯ ತೋರಿದ ಆರೋಗ್ಯ ಮಿತ್ರರ ವಿರುದ್ಧವೂ ಕ್ರಮದ ಎಚ್ಚರಿಕೆ
ಮಂಗಳೂರು, ಜೂನ್ 8: ಆಯುಷ್ಮಾನ್ ಕರ್ನಾಟಕ ಯೋಜನೆಯಡಿ ಬಿಪಿಎಲ್ ಕಾರ್ಡ್‌ದಾರರಿಂದ ಖಾಸಗಿ ಆಸ್ಪತ್ರೆಗಳು ಯಾವುದೇ ಹೆಚ್ಚುವರಿ ಶುಲ್ಕ ವಸೂಲಿ ಮಾಡಬಾರದು. ಒಂದು ವೇಳೆ ಹೆಚ್ಚುವರಿ ಹಣ ಪಡೆಯುತ್ತಿರುವುದು ಕಂಡುಬಂದರೆ ಆರೋಗ್ಯ ಮಿತ್ರರು ತಕ್ಷಣ ಮಧ್ಯಪ್ರವೇಶಿಸಿ ಫಲಾನುಭವಿಗಳಿಗೆ ಉಚಿತ ಚಿಕಿತ್ಸೆ ದೊರಕುವಂತೆ ಕ್ರಮ ಕೈಗೊಳ್ಳಬೇಕು. ಈ ಜವಾಬ್ದಾರಿಯಲ್ಲಿ ನಿರ್ಲಕ್ಷ್ಯ ತೋರಿದ ಆರೋಗ್ಯ ಮಿತ್ರರ ವಿರುದ್ಧ ಇಲಾಖಾ ಕ್ರಮ ಜರುಗಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಫರೀದ್ ಎಚ್ಚರಿಕೆ ನೀಡಿದ್ದಾರೆ.
ಪಡೀಲ್‌ನ ಪ್ರಜಾಸೌಧದಲ್ಲಿ ಆರೋಗ್ಯ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಥಮ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಸಾಮಾನ್ಯರಿಗೆ ಗುಣಮಟ್ಟದ ಆರೋಗ್ಯ ಸೇವೆ ದೊರಕಿಸುವ ಉದ್ದೇಶದಿಂದ ಆರೋಗ್ಯ ಮಿತ್ರರನ್ನು ನೇಮಕ ಮಾಡಲಾಗಿದ್ದು, ಅವರು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಹೇಳಿದರು.
ಆಯುಷ್ಮಾನ್ ಸೇರಿದಂತೆ ವಿವಿಧ ಸರ್ಕಾರಿ ಆರೋಗ್ಯ ಯೋಜನೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುವ ಖಾಸಗಿ ಆಸ್ಪತ್ರೆಗಳು ನಿಯಮ ಉಲ್ಲಂಘಿಸಿ ಫಲಾನುಭವಿಗಳಿಗೆ ಸೌಲಭ್ಯ ನಿರಾಕರಿಸಿದರೆ ಅಥವಾ ಯೋಜನೆಗಳನ್ನು ದುರುಪಯೋಗಪಡಿಸಿಕೊಂಡರೆ ಅಂತಹ ಆಸ್ಪತ್ರೆಗಳ ಮಾನ್ಯತೆಯನ್ನು ರದ್ದುಪಡಿಸಲು ಹಿಂಜರಿಯುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ಎಪಿಎಲ್ ಮತ್ತು ಬಿಪಿಎಲ್ ವರ್ಗದ ಜನರಿಗೆ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಆರೋಗ್ಯ ಯೋಜನೆಗಳ ಪುನರ್‌ಪರಿಶೀಲನೆ ನಡೆಸಿ ಹೊಸ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ತಿಳಿಸಿದರು.
ರಾಜ್ಯದ ಸರ್ಕಾರಿ ಆಸ್ಪತ್ರೆಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆ ನಿವಾರಣೆಗೆ ಸಮಗ್ರ ಯೋಜನೆ ರೂಪಿಸಲಾಗುವುದು. ವೈದ್ಯರನ್ನು ಸರ್ಕಾರಿ ಸೇವೆಯತ್ತ ಆಕರ್ಷಿಸಲು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸಲು ಪ್ರೋತ್ಸಾಹಿಸುವ ಕುರಿತು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಆರೋಗ್ಯ ಇಲಾಖೆಯ ವಿವಿಧ ಯೋಜನೆಗಳು ಜನರಿಗೆ ಪರಿಣಾಮಕಾರಿಯಾಗಿ ತಲುಪಬೇಕಾದರೆ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯವಸ್ಥೆ ಮತ್ತಷ್ಟು ಬಲಗೊಳ್ಳಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಹಲವು ಸಮಸ್ಯೆಗಳು ಬೆಳಕಿಗೆ ಬಂದಿದ್ದು, ಅವುಗಳ ಪರಿಹಾರಕ್ಕೆ ಆದ್ಯತೆ ನೀಡಲಾಗುವುದು ಎಂದು ಸಚಿವ ಖಾದರ್ ಹೇಳಿದರು.