ಮಂಗಳೂರು, ಜೂ.10: “ಸಬ್ಕಾ ಸಾಥ್, ಸಬ್ಕಾ ವಿಕಾಸ್” ಎಂಬ ಧ್ಯೇಯದೊಂದಿಗೆ ದೇಶವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಯಶಸ್ವಿ 12 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆರೋಗ್ಯ, ಆಯುಷ್ಯ ವೃದ್ಧಿ ಹಾಗೂ ದೇಶದ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಪೂಜೆ ನೆರವೇರಿಸಲಾಯಿತು. ದೇಶದ ಪ್ರಗತಿ, ಜನಕಲ್ಯಾಣ ಹಾಗೂ ಸುಶಾಸನದ ಮೂಲಕ ಕೇಂದ್ರ ಸರ್ಕಾರ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಭಾರತವನ್ನು ವಿಶ್ವಮಟ್ಟದಲ್ಲಿ ಮತ್ತಷ್ಟು ಬಲಿಷ್ಠ ರಾಷ್ಟ್ರವನ್ನಾಗಿ ರೂಪಿಸುವಲ್ಲಿ ಪ್ರಧಾನಿ ಮೋದಿ ಅವರ ನಾಯಕತ್ವ ಮಹತ್ವದ ಪಾತ್ರ ವಹಿಸಿದೆ ಎಂದು ಮುಖಂಡರು ಅಭಿಪ್ರಾಯಪಟ್ಟರು.
ಕೇಂದ್ರ ಸರ್ಕಾರದ 12 ವರ್ಷಗಳ ಆಡಳಿತಾವಧಿಯನ್ನು ಸ್ಮರಣೀಯಗೊಳಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರು, ಶಾಸಕರು ಹಾಗೂ ಪಕ್ಷದ ಪ್ರಮುಖ ಮುಖಂಡರು , ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು