ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ (MDMA) ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಜನನ್ ಜಗನ್ನಾಥ್ (29) ಮತ್ತು ಪರೀಕ್ಷಿತ್ (33) ಎಂದು ಗುರುತಿಸಲಾಗಿದೆ. ಗೂಡ್ ಶೆಡ್ಡೆ ಪ್ರದೇಶದಲ್ಲಿ ಸಾರ್ವಜನಿಕರಿಗೆ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ದಾಳಿ ನಡೆಸಿದರು.
ಕಾರ್ಯಾಚರಣೆಯಲ್ಲಿ ಆರೋಪಿಗಳಿಂದ 11.68 ಗ್ರಾಂ ಎಂಡಿಎಂಎ, ₹1,110 ನಗದು, ಮೂರು ಮೊಬೈಲ್ ಫೋನ್‌ಗಳು ಹಾಗೂ ಒಂದು ತೂಕ ಮಾಪನ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.

ಇದೇ ವೇಳೆ, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಈಗಾಗಲೇ ದಾಖಲಾಗಿದ್ದ ಮತ್ತೊಂದು ಎನ್‌ಡಿಪಿಎಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಸುಶಾನ್ ಪೂಜಾರಿ (27) ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಮೊದಲೇ ಒಬ್ಬ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಮುಂದುವರಿದ ತನಿಖೆಯ ವೇಳೆ ಪ್ರಕರಣದಲ್ಲಿ ಭಾಗಿಯಾಗಿದ್ದ ಸುಶಾನ್ ಪೂಜಾರಿಯನ್ನು ಜೂನ್ 9ರಂದು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ.

ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ವಿಚಾರಣೆ ಹಾಗೂ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾದಕ ವಸ್ತುಗಳ ಅಕ್ರಮ ಸಾಗಾಟ ಮತ್ತು ಮಾರಾಟವನ್ನು ತಡೆಯಲು ಮಂಗಳೂರು ನಗರ ಪೊಲೀಸರು ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದು, ಸಾರ್ವಜನಿಕರು ಇಂತಹ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!