ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸುರತ್ಕಲ್‌ನಲ್ಲಿ ಬೃಹತ್ ಮಾನವ ಸರಪಳಿ

ಸುರತ್ಕಲ್: ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ರಾಜ್ಯ ಸರ್ಕಾರದ ಆದೇಶವನ್ನು ವಿರೋಧಿಸಿ ಹಾಗೂ ಸುರತ್ಕಲ್ ಹೋಬಳಿಯಲ್ಲಿ ಸಮುದಾಯ ಆಸ್ಪತ್ರೆ ಸ್ಥಾಪನೆಗೆ ಆಗ್ರಹಿಸಿ “ಸರ್ಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ” ನೇತೃತ್ವದಲ್ಲಿ ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ಬೃಹತ್ ಮಾನವ ಸರಪಳಿ ಕಾರ್ಯಕ್ರಮ ನಡೆಯಿತು.

ಸುರತ್ಕಲ್ ವ್ಯಾಪ್ತಿಯ ವಿವಿಧ ಸಂಘ-ಸಂಸ್ಥೆಗಳ ಕಾರ್ಯಕರ್ತರು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸರ್ಕಾರದ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮಾನವ ಸರಪಳಿಗೆ ಮುನ್ನ ನಡೆದ ಸಭೆಯಲ್ಲಿ ಮಾತನಾಡಿದ ಹೋರಾಟ ಸಮಿತಿಯ ಜಿಲ್ಲಾ ಸಂಚಾಲಕ ಮುನೀರ್ ಕಾಟಿಪಳ್ಳ, ಸರ್ಕಾರಿ ಆಸ್ಪತ್ರೆಗಳ ಬಲವರ್ಧನೆಗಾಗಿ ಕಳೆದ ಎರಡು ದಶಕಗಳಿಂದ ಹೋರಾಟ ನಡೆಸುತ್ತಿದ್ದರೂ ಸರ್ಕಾರಗಳು ಖಾಸಗಿ ಆರೋಗ್ಯ ಲಾಬಿಗಳ ಹಿತಾಸಕ್ತಿಗಳಿಗೆ ಮಣಿಯುತ್ತಿವೆ ಎಂದು ಆರೋಪಿಸಿದರು. ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಸಮುದಾಯ ಆಸ್ಪತ್ರೆಗಳು ವೈದ್ಯರ ಕೊರತೆಯಿಂದ ಬಳಲುತ್ತಿದ್ದು, ಅದನ್ನೇ ನೆಪವನ್ನಾಗಿ ಮಾಡಿಕೊಂಡು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಟೀಕಿಸಿದರು.

ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಖಾಸಗಿ ಲಾಬಿಗಳ ಪರ ನಿಲುವು ತಾಳಿರುವುದು ಆತಂಕಕಾರಿ ಬೆಳವಣಿಗೆ ಎಂದು ಅವರು ಹೇಳಿದರು.

ಸಭೆಯಲ್ಲಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಸದಾಶಿವ ಪಡುಬಿದ್ರೆ ಹಾಗೂ ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಜ್ ಮಾತನಾಡಿ ಸರ್ಕಾರಿ ಆರೋಗ್ಯ ಸೇವೆಗಳ ರಕ್ಷಣೆಗೆ ಜನರು ಒಗ್ಗಟ್ಟಿನಿಂದ ಹೋರಾಡಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ದಲಿತ ಸಂಘರ್ಷ ಸಮಿತಿ, ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿ, ಜನವಾದಿ ಮಹಿಳಾ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು. ಸರ್ಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ, ಸುರತ್ಕಲ್ ಘಟಕದ ಸಂಚಾಲಕ ಶ್ರೀನಾಥ್ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು

SHARE
Loading spinner

Leave a Reply

Your email address will not be published. Required fields are marked *

error: Content is protected !!