ದ.ಕ ಜಿಲ್ಲೆಯ 20 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ ವರದಿಯನ್ನು ಗಂಭೀರವಾಗಿ ಪರಿಗಣಿಸಿ : ಎಸ್ ಡಿ ಪಿ ಐ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ

ಬಿ.ಸಿ ರೋಡ್: ಶೈಕ್ಷಣಿಕ ವರ್ಷ ಆರಂಭವಾಗಿ 18 ದಿನಗಳು ಕಳೆದಿದ್ದರೂ ದಕ್ಷಿಣ ಕನ್ನಡ ಜಿಲ್ಲೆಯ 20 ಸರ್ಕಾರಿ ಶಾಲೆಗಳಲ್ಲಿ ಒಂದೇ ಒಂದು ವಿದ್ಯಾರ್ಥಿಯೂ ದಾಖಲಾತಿಯಾಗದಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಮಾತ್ರವಲ್ಲದೆ, ದಾಖಲಾತಿ ನಡೆದಿರುವ ಅನೇಕ ಸರ್ಕಾರಿ ಶಾಲೆಗಳಲ್ಲಿಯೂ ವಿದ್ಯಾರ್ಥಿಗಳ ಸಂಖ್ಯೆ ಅತ್ಯಂತ ಕಡಿಮೆಯಾಗಿರುವುದು ಸರ್ಕಾರಿ ಶಿಕ್ಷಣ ವ್ಯವಸ್ಥೆಯ ದುಸ್ಥಿತಿಯನ್ನು ಬಿಂಬಿಸುತ್ತಿದೆ ಎಂದು ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ ಕಳವಳ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಶಾಲೆಗಳ ಮೇಲಿನ ಜನರ ವಿಶ್ವಾಸ ಕುಸಿಯುತ್ತಿರುವುದು, ಮೂಲ ಸೌಕರ್ಯಗಳ ಕೊರತೆ, ಶಿಕ್ಷಕರ ಅಭಾವ, ಗುಣಮಟ್ಟದ ಶಿಕ್ಷಣದ ಬಗ್ಗೆ ಮೂಡಿರುವ ಅನುಮಾನ ಹಾಗೂ ಖಾಸಗಿ ಶಾಲೆಗಳತ್ತ ಹೆಚ್ಚುತ್ತಿರುವ ಒಲವು ಇಂತಹ ಪರಿಸ್ಥಿತಿಗೆ ಕಾರಣವಾಗಿದೆ. ಇದು ಮುಂದಿನ ದಿನಗಳಲ್ಲಿ ಇನ್ನಷ್ಟು ಸರ್ಕಾರಿ ಶಾಲೆಗಳು ಮುಚ್ಚುವ ಅಪಾಯವನ್ನೂ ಸೃಷ್ಟಿಸಬಹುದು.

ಸರ್ಕಾರ ಮತ್ತು ಶಿಕ್ಷಣ ಇಲಾಖೆ ಈ ವಿಚಾರವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ತಕ್ಷಣವೇ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು.ವಿಶೇಷವಾಗಿ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಅಗತ್ಯ ಮೂಲ ಸೌಕರ್ಯಗಳು, ಸುರಕ್ಷಿತ ಹಾಗೂ ಅಚ್ಚುಕಟ್ಟಾದ ಕಟ್ಟಡಗಳು ನಿರ್ಮಿಸಬೇಕು.ಖಾಲಿ ಇರುವ ಹುದ್ದೆಗಳಿಗೆ ಅರ್ಹ ಮತ್ತು ಅನುಭವಿ ಶಿಕ್ಷಕರನ್ನು ತುರ್ತಾಗಿ ನೇಮಕ ಮಾಡಬೇಕು.ಶಾಲೆಗಳಲ್ಲಿ ಡಿಜಿಟಲ್ ಶಿಕ್ಷಣ, ಕಂಪ್ಯೂಟರ್, ವಿಜ್ಞಾನ ಪ್ರಯೋಗಾಲಯ ಮತ್ತು ಗ್ರಂಥಾಲಯ ಸೌಲಭ್ಯಗಳನ್ನು ವಿಸ್ತರಿಸಬೇಕು.ಗ್ರಾಮೀಣ ಮತ್ತು ಹಿಂದುಳಿದ ಪ್ರದೇಶಗಳ ಶಾಲೆಗಳಿಗೆ ವಿಶೇಷ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಬೇಕು.ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸಲು ಹಾಗೂ ಸರ್ಕಾರಿ ಶಾಲೆಗಳ ಬಗ್ಗೆ ಜನರಲ್ಲಿ ವಿಶ್ವಾಸ ಮೂಡಿಸಲು ವಿಶೇಷ ದಾಖಲಾತಿ ಅಭಿಯಾನ ಹಮ್ಮಿಕೊಳ್ಳಬೇಕು.ಕಡಿಮೆ ದಾಖಲಾತಿ ಹೊಂದಿರುವ ಶಾಲೆಗಳ ಸಮಸ್ಯೆಗಳನ್ನು ಗುರುತಿಸಿ ಪರಿಹಾರ ಕ್ರಮಗಳನ್ನು ಜಾರಿಗೆ ತರಬೇಕು.ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಕೌಶಲ್ಯಾಧಾರಿತ ತರಬೇತಿ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಬೇಕು.ಶಾಲೆಗಳನ್ನು ಮುಚ್ಚುವ ಬದಲು ಅವುಗಳನ್ನು ಬಲಪಡಿಸಿ, ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಉಳಿಸುವತ್ತ ಸರ್ಕಾರ ಗಮನ ಹರಿಸಬೇಕು.

ಶಿಕ್ಷಣವು ಪ್ರತಿಯೊಬ್ಬ ಮಗುವಿನ ಮೂಲಭೂತ ಹಕ್ಕಾಗಿದ್ದು, ಸರ್ಕಾರಿ ಶಾಲೆಗಳು ಸಮಾಜದ ಬಡ ಮತ್ತು ಮಧ್ಯಮ ವರ್ಗದ ಮಕ್ಕಳ ಭವಿಷ್ಯದ ಆಧಾರವಾಗಿವೆ. ಆದ್ದರಿಂದ ಸರ್ಕಾರ ಈ ಗಂಭೀರ ಪರಿಸ್ಥಿತಿಯನ್ನು ನಿರ್ಲಕ್ಷಿಸದೆ ತಕ್ಷಣ ಕ್ರಮ ಕೈಗೊಂಡು ಸರ್ಕಾರಿ ಶಾಲೆಗಳ ಉಳಿವು ಮತ್ತು ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!