ಘನ ತ್ಯಾಜ್ಯ ನಿರ್ವಹಣಾ ನಿಯಮಗಳ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು,: ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳು ಘನ ತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಕಾಲಬದ್ಧ ಕ್ರಿಯಾ ಯೋಜನೆ ರೂಪಿಸಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮನೆ-ಮನೆ ಕಸ ಸಂಗ್ರಹಣೆ ಹಾಗೂ ಮೂಲದಲ್ಲಿಯೇ ತ್ಯಾಜ್ಯ ವಿಂಗಡಣೆಗೆ ಆದ್ಯತೆ ನೀಡಿ ಶೇ.100ರಷ್ಟು ಗುರಿ ಸಾಧಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಸಾರ್ವಜನಿಕರಲ್ಲಿ ತ್ಯಾಜ್ಯ ವಿಂಗಡಣೆ ಹಾಗೂ ಸ್ವಚ್ಛತೆ ಕುರಿತು ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ನಗರ ಪ್ರದೇಶಗಳಲ್ಲಿ ಘನ ತ್ಯಾಜ್ಯ ಸಂಸ್ಕರಣಾ ಘಟಕಗಳಿಗೆ ಅಗತ್ಯ ಭೂಮಿಯನ್ನು ಗುರುತಿಸಿ ಅಭಿವೃದ್ಧಿಪಡಿಸುವುದು ಹಾಗೂ ಬಲ್ಕ್ ವೇಸ್ಟ್ ಜನರೇಟರ್‌ಗಳ ಮಾಹಿತಿಯನ್ನು ವ್ಯವಸ್ಥಿತವಾಗಿ ನಿರ್ವಹಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಜಿಲ್ಲೆಯ ವಿವಿಧ ಸ್ಥಳೀಯ ಸಂಸ್ಥೆಗಳಲ್ಲಿ ಸಂಗ್ರಹವಾಗಿರುವ ಲೆಗಸಿ ತ್ಯಾಜ್ಯದ ವೈಜ್ಞಾನಿಕ ವಿಲೇವಾರಿ ಕಾರ್ಯವನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಾಯಕ್ ಕಾರ್ಬಾರಿ ಮಾತನಾಡಿ, ಗ್ರಾಮ ಪಂಚಾಯತ್‌ಗಳಲ್ಲಿ ಘನ ತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದರೊಂದಿಗೆ ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವುದನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಡಾ. ಸಂತೋಷ್ ಕುಮಾರ್, ತ್ಯಾಜ್ಯ ಸಂಗ್ರಹಣೆ, ಸಾಗಣೆ, ಸಂಸ್ಕರಣೆ ಮತ್ತು ವಿಲೇವಾರಿಯ ಪ್ರತಿಯೊಂದು ಹಂತದಲ್ಲಿಯೂ ನಿಯಮಗಳ ಪಾಲನೆ ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದರು. ಬಲ್ಕ್ ವೇಸ್ಟ್ ಜನರೇಟರ್‌ಗಳ ನೋಂದಣಿ, ಲೆಗಸಿ ತ್ಯಾಜ್ಯದ ತ್ವರಿತ ವಿಲೇವಾರಿ, ಸ್ವಚ್ಛತಾ ಸಿಬ್ಬಂದಿಗೆ ಸುರಕ್ಷತಾ ಸಾಧನಗಳ ಒದಗಿಕೆ ಹಾಗೂ ನಿಯಮಿತ ಪ್ರಗತಿ ವರದಿ ಸಲ್ಲಿಕೆಗೆ ಒತ್ತು ನೀಡಿದರು.

ಸಭೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಘನ ತ್ಯಾಜ್ಯ ನಿರ್ವಹಣಾ ನಿಯಮಗಳ ಪ್ರಮುಖ ಅಂಶಗಳು ಹಾಗೂ ಸ್ಥಳೀಯ ಸಂಸ್ಥೆಗಳ ಜವಾಬ್ದಾರಿಗಳ ಕುರಿತು ಮಾಹಿತಿ ನೀಡಿದರು. ಜಲ ಕಾಯ್ದೆ, ವಾಯು ಕಾಯ್ದೆ ಹಾಗೂ ಘನ ತ್ಯಾಜ್ಯ ನಿರ್ವಹಣಾ ನಿಯಮಗಳಡಿ ಅಗತ್ಯ ಸಮ್ಮತಿ ಪತ್ರಗಳನ್ನು ಪಡೆಯುವಂತೆ ಸೂಚಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಶಿಕ್ಷಣ ಇಲಾಖೆ, ತಾಲೂಕು ಪಂಚಾಯತ್, ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ಪರಿಸರ ತಜ್ಞರು ಹಾಗೂ ಮೇಲ್ವಿಚಾರಣೆ ಸಮಿತಿಯ ಸದಸ್ಯರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಘನ ತ್ಯಾಜ್ಯಗಳ ನಾಲ್ಕು ವಿಧದ ವಿಂಗಡಣೆ ಕುರಿತು ಜಾಗೃತಿ ಮೂಡಿಸುವ ಪೋಸ್ಟರ್‌ಗಳನ್ನು ಬಿಡುಗಡೆಗೊಳಿಸಲಾಯಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!