ಮಂಗಳೂರು, ಜೂನ್ 25: ಆರ್ಥಿಕ ಸಂಕಷ್ಟದಿಂದ ಶಿಕ್ಷಣದಿಂದ ವಂಚಿತರಾಗುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನೆರವಾಗುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ಎಜುಕಾರುಣ್ಯ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದಿ. ಗುರುವಪ್ಪ ಎನ್.ಟಿ. ಬಾಳೆಪುಣಿ ಸ್ಮರಣಾರ್ಥ ದತ್ತಿನಿಧಿ ಪ್ರತಿಭಾ ಪುರಸ್ಕಾರದ ಎರಡನೇ ವರ್ಷದ ಕಾರ್ಯಕ್ರಮ ಜೂನ್ 26ರಂದು ಮಂಗಳೂರು ಪ್ರೆಸ್ ಕ್ಲಬ್ನಲ್ಲಿ ನಡೆಯಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಮೋಹನ್ದಾಸ್ ಮರಕಡ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಟ್ರಸ್ಟ್ ಪ್ರಸ್ತುತ 30ಕ್ಕೂ ಹೆಚ್ಚು ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ನೆರವು ನೀಡುತ್ತಿದ್ದು, ಬೋಧನಾ ಶುಲ್ಕದ ಜೊತೆಗೆ ಸಮವಸ್ತ್ರ, ಪುಸ್ತಕಗಳು ಹಾಗೂ ಬಸ್ ಶುಲ್ಕವನ್ನೂ ಭರಿಸುತ್ತಿದೆ ಎಂದು ಹೇಳಿದರು.
ಈ ಬಾರಿ ಬಾಳೆಪುಣಿ ದತ್ತಿನಿಧಿಯಡಿ ಆರು ಮಂದಿ ವಿದ್ಯಾರ್ಥಿಗಳಿಗೆ ನೆರವು ನೀಡಲಾಗುತ್ತಿದ್ದು, ಒಟ್ಟು ₹1.50 ಲಕ್ಷ ಮೊತ್ತದ ದತ್ತಿನಿಧಿ ವಿತರಿಸಲಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಉದ್ಘಾಟಿಸಲಿದ್ದು, ಉದ್ಯಮಿ ರಾಧಾಕೃಷ್ಣ ಉಮಿಯ ಹಾಗೂ ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್ ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ರಮೇಶ್ ಶೆಟ್ಟಿ ವಿವೇಕನಗರ, ಟ್ರಸ್ಟಿಗಳಾದ ಪ್ರಶಾಂತ್ ಅಬ್ಬೆಟ್ಟು, ದಿನೇಶ್ ನಾಯ್ಕ ಸೇರಿದಂತೆ ಇತರರು ಉಪಸ್ಥಿತರಿದ್ದರು.