ಉಪನ್ಯಾಸಕರಿಗೆ 9-10ನೇ ತರಗತಿ ಬೋಧನೆ ಪ್ರಸ್ತಾವನೆಗೆ ತೀವ್ರ ವಿರೋಧ

ಮಂಗಳೂರು: ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು 9 ಮತ್ತು 10ನೇ ತರಗತಿಗಳಿಗೆ ಬೋಧನೆ ಮಾಡಬೇಕು ಎಂಬ ಕರ್ನಾಟಕ ಸಾಮಾನ್ಯ ಸೇವೆಗಳು (ಪದವಿ ಪೂರ್ವ ಶಿಕ್ಷಣ) ನೇಮಕಾತಿ ನಿಯಮಗಳು-2013ಕ್ಕೆ 2026ರಲ್ಲಿ ಪ್ರಸ್ತಾಪಿಸಲಾದ ಕರಡು ತಿದ್ದುಪಡಿಯನ್ನು ಅನುದಾನಿತ ಪದವಿ ಪೂರ್ವ ಕಾಲೇಜು ಉಪನ್ಯಾಸಕರನ್ನು ಪ್ರತಿನಿಧಿಸುವ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ(ರಿ) ಹಾಗೂ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ(ರಿ), ದಕ್ಷಿಣ ಕನ್ನಡ ಜಿಲ್ಲಾ ಘಟಕ ತೀವ್ರವಾಗಿ ಖಂಡಿಸಿದೆ.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಡಾ. ನವೀನ್ ಶೆಟ್ಟಿ ಕೆ., ರಾಜ್ಯದಲ್ಲಿ ಎಸ್‌ಇಪಿ ಜಾರಿಯ ಹಂತದಲ್ಲಿರುವ ಸಂದರ್ಭದಲ್ಲಿ ಇಂತಹ ತುರ್ತು ನಿಯಮ ಬದಲಾವಣೆಯ ಅಗತ್ಯವಿಲ್ಲ. ಶಿಕ್ಷಣ ತಜ್ಞರು ಹಾಗೂ ಬೋಧಕರನ್ನೊಳಗೊಂಡ ಸಮಿತಿಯನ್ನು ರಚಿಸಿ, ಸಾಧಕ-ಬಾಧಕಗಳ ಕುರಿತು ಸಮಗ್ರ ಚರ್ಚೆ ನಡೆಸಿದ ಬಳಿಕವೇ ಈ ಕುರಿತು ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಶಿಕ್ಷಣದ ಗುಣಮಟ್ಟಕ್ಕೆ ಧಕ್ಕೆಯಾಗುವ ಆತಂಕ

ಸಂಘದ ಜಂಟಿ ಕಾರ್ಯದರ್ಶಿ ವಿಠಲ್ ಮಾತನಾಡಿ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಶಿಕ್ಷಣದ ಬೋಧನಾ ವಿಧಾನಗಳು ಭಿನ್ನವಾಗಿದ್ದು, ಉಪನ್ಯಾಸಕರನ್ನು ಎರಡೂ ಹಂತಗಳಲ್ಲಿ ಬಳಸುವುದರಿಂದ ಶಿಕ್ಷಣದ ಗುಣಮಟ್ಟ ಹಾಗೂ ವಿದ್ಯಾರ್ಥಿಗಳ ಕಲಿಕಾ ಪ್ರಕ್ರಿಯೆಯ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಲಿದೆ ಎಂದು ಹೇಳಿದರು.

ಬಡ್ತಿ ಪಡೆದ ಉಪನ್ಯಾಸಕರನ್ನು ಪುನಃ 9 ಮತ್ತು 10ನೇ ತರಗತಿಗಳಿಗೆ ಬೋಧನೆಗೆ ನಿಯೋಜಿಸುವುದು ಬಡ್ತಿಯ ಉದ್ದೇಶವನ್ನೇ ಹಾಳು ಮಾಡುತ್ತದೆ. ಕಾರ್ಯಭಾರ ಸಮತೋಲನದ ಹೆಸರಿನಲ್ಲಿ ಉಪನ್ಯಾಸಕರನ್ನು ವಿವಿಧ ಕಾಲೇಜುಗಳಿಗೆ ನಿಯೋಜಿಸುವುದರಿಂದ ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ಶಿಕ್ಷಣದ ಗುಣಮಟ್ಟಕ್ಕೆ ಧಕ್ಕೆಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ತಜ್ಞರ ಸಮಿತಿಯ ವರದಿ ಪಡೆಯದೇ ಸರ್ಕಾರ ಈ ಪ್ರಸ್ತಾವಿತ ತಿದ್ದುಪಡಿಯನ್ನು ಜಾರಿಗೊಳಿಸಬಾರದು. ಒಂದು ವೇಳೆ ಜಾರಿಗೊಳಿಸಿದಲ್ಲಿ ರಾಜ್ಯದ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಪ್ರಜಾಸತ್ತಾತ್ಮಕ ರೀತಿಯಲ್ಲಿ ಸಂಘಟಿತ ಹೋರಾಟ ನಡೆಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಪ್ರಮುಖರಾದ ಹರಿಪ್ರಕಾಶ್, ಶೀನಪ್ಪ, ಸಚಿತ್ ಸುವರ್ಣ, ಸೀಮಾ ಹಾಗೂ ಇತರರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!