ಮತದಾರರ ಪಟ್ಟಿ ತ್ರೀವ ಪರಿಷ್ಕರಣೆ (SIR) ಕಾರ್ಯಕ್ರಮಕ್ಕೆ ಪೂರ್ವಭಾವಿ ತಯಾರಿ: ಕಾಂಗ್ರೆಸ್ ಮುಖಾಂಡರ ಸಭೆ SIR ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಲು ಐವನ್ ಡಿ’ ಸೋಜ ಕರೆ

ಮಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR) ಕಾರ್ಯಕ್ರಮಕ್ಕೆ ಸಂಬಂಧಿಸಿದ ಪೂರ್ವಭಾವಿ ತಯಾರಿಯ ಅಂಗವಾಗಿ ಕಾಂಗ್ರೆಸ್ ಪಕ್ಷದ ವಾರ್ಡ್ ಅಧ್ಯಕ್ಷರು ಹಾಗೂ ಬ್ಲಾಕ್ ಅಧ್ಯಕ್ಷರ ಸಭೆ ನಡೆಯಿತು.


ಸಭೆಯನ್ನುದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ, ಮುಂದಿನ ಮೂರು ತಿಂಗಳ ಅವಧಿಯಲ್ಲಿ ನಡೆಯಲಿರುವ SIR ಕಾರ್ಯಕ್ರಮದ ಸಂದರ್ಭದಲ್ಲಿ ಪ್ರತಿ ಮತದಾರರಿಗೂ Booth Level Officer (BLO) ಅವರು ನೀಡುವ Enumeration Form ಅನ್ನು ಸರಿಯಾಗಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಸಹಿ ಮಾಡಿ ತಕ್ಷಣವೇ BLO ಅವರಿಗೆ ಹಿಂತಿರುಗಿಸಬೇಕು ಎಂದು ಕರೆ ನೀಡಿದರು. ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಕಾಂಗ್ರೆಸ್ ಕಾರ್ಯಕರ್ತರು ಮನೆ-ಮನೆಗೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸಿ ಅಗತ್ಯ ಸಹಕಾರ ನೀಡಬೇಕೆಂದು ತಿಳಿಸಿದರು.


ಬಿಜೆಪಿ ಸರ್ಕಾರವು ರಾಜಕೀಯ ಉದ್ದೇಶದಿಂದ SIR ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಂಡು ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡುವ ಪ್ರಯತ್ನ ನಡೆಸುತ್ತಿದೆ ಎಂದು ಆರೋಪಿಸಿದ ಐವನ್ ಡಿ’ಸೋಜಾ, ಮತದಾರರು ಹಾಗೂ ಅಧಿಕಾರಿಗಳ ಮೇಲೆ ಒತ್ತಡ ಹೇರುವ ಮೂಲಕ ಮತದಾರರ ಹಕ್ಕಿಗೆ ಧಕ್ಕೆ ತರುವ ಪ್ರಯತ್ನಗಳು ನಡೆಯುತ್ತಿರುವುದನ್ನು ತೀವ್ರವಾಗಿ ಖಂಡಿಸಿದರು.


ಚುನಾವಣಾ ಆಯೋಗದ ಆದೇಶಗಳು ಹಾಗೂ SIR ಪ್ರಕ್ರಿಯೆಯ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದ್ದು, ಪ್ರತಿಯೊಬ್ಬ ಅರ್ಹ ಮತದಾರರ ಹೆಸರೂ ಮತದಾರರ ಪಟ್ಟಿಯಲ್ಲಿ ಮುಂದುವರಿಯುವಂತೆ ಕಾಂಗ್ರೆಸ್ ಕಾರ್ಯಕರ್ತರು ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.


ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಮನೆ-ಮನೆಗೆ ತೆರಳಿ ಮತದಾರರನ್ನು ಭೇಟಿ ಮಾಡಿ ಜಾಗೃತಿ ಮೂಡಿಸುವ ಕಾರ್ಯವನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವಂತೆ ಸಲಹೆ ನೀಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಬಿ. ಸಾಲ್ಯಾನ್ ಮಾತನಾಡಿ, ಪ್ರತಿಯೊಂದು ವಾರ್ಡ್‌ನಲ್ಲೂ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಂಡು ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!