ಮಂಗಳೂರು:ರಾಜ್ಯಾದ್ಯಂತ ವಿಶೇಷ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬುಧವಾರ ಆರಂಭಗೊಂಡಿದ್ದು, ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ವೇದವ್ಯಾಸ ಕಾಮತ್ ಅಧಿಕಾರಿಗಳ ಸಮ್ಮುಖದಲ್ಲಿ ಪ್ರಕ್ರಿಯೆಗೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಮುಂದಿನ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ಭೇಟಿ ನೀಡಿ ಅಗತ್ಯ ನಮೂನೆಗಳನ್ನು ವಿತರಿಸಲಿದ್ದಾರೆ. ಸಾರ್ವಜನಿಕರು ಅಗತ್ಯ ದಾಖಲೆಗಳೊಂದಿಗೆ ನಮೂನೆಗಳನ್ನು ಸರಿಯಾಗಿ ಭರ್ತಿ ಮಾಡಿ ಸಲ್ಲಿಸುವ ಮೂಲಕ ಪರಿಷ್ಕೃತ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆಯಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

18 ವರ್ಷ ಪೂರ್ಣಗೊಂಡ ಯುವಜನರು ಹಾಗೂ ಬೇರೆ ಪ್ರದೇಶಗಳಿಂದ ಬಂದು ಕ್ಷೇತ್ರದಲ್ಲಿ ನೆಲೆಸಿರುವ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೊಸದಾಗಿ ಹೆಸರು ನೋಂದಾಯಿಸಿಕೊಳ್ಳಲು ಅವಕಾಶವಿದೆ. ಯಾವುದೇ ಅರ್ಹ ಮತದಾರ ತನ್ನ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಅವರು ಹೇಳಿದರು.
ತಾವು ಸಹ ಈ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದು, ಸಾರ್ವಜನಿಕರೂ ಸಕ್ರಿಯವಾಗಿ ಸಹಕರಿಸಿ ಬಲಿಷ್ಠ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಕರೆ ನೀಡಿದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಉಪ ಆಯುಕ್ತ (ಅಭಿವೃದ್ಧಿ) ನರೇಶ್ ಶೆಣೈ, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಅಕ್ಷತಾ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

