ವೈಭವೀಕರಣವಿಲ್ಲದ ನೈಜ ಸುದ್ದಿಗಳು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪೂರಕ: ಸುಧೀರ್ ಕುಮಾರ್ ರೆಡ್ಡಿ

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆಯಲ್ಲಿ ಪೊಲೀಸ್ ಆಯುಕ್ತರ ಕರೆ

ಮಂಗಳೂರು, ಜು. 1: ವೈಭವೀಕರಣವಿಲ್ಲದ, ವಸ್ತುನಿಷ್ಠ ಮತ್ತು ನೈಜ ಸುದ್ದಿಗಳು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪೂರಕವಾಗಿದ್ದು, ಪತ್ರಕರ್ತರು ಪಾರದರ್ಶಕ ಹಾಗೂ ಜವಾಬ್ದಾರಿಯುತ ವರದಿಗಾರಿಕೆಗೆ ಆದ್ಯತೆ ನೀಡಬೇಕು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾಭವನ ಟ್ರಸ್ಟ್ ವತಿಯಿಂದ ಬುಧವಾರ ಪತ್ರಿಕಾಭವನದಲ್ಲಿ ಆಯೋಜಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆಡಳಿತ ವ್ಯವಸ್ಥೆ ಮತ್ತು ಮಾಧ್ಯಮ ಒಂದೇ ಹಾದಿಯಲ್ಲಿ ಸಾಗುತ್ತಿರುವುದು ಆರೋಗ್ಯಕರ ಬೆಳವಣಿಗೆಯಾಗಿದೆ. ಹಿಂದೆ ಒಂದೇ ಘಟನೆಯನ್ನು ವಿವಿಧ ರೀತಿಯಲ್ಲಿ ವೈಭವೀಕರಿಸಿ ಬಿಂಬಿಸುವ ಪ್ರವೃತ್ತಿ ಕಂಡುಬರುತ್ತಿತ್ತು. ಆದರೆ ಇಂದು ಫ್ಯಾಕ್ಟ್ ಚೆಕ್‌ಗೆ ಒತ್ತು ನೀಡುವ ಮೂಲಕ ನೈಜ ಸುದ್ದಿಗಳನ್ನು ಪ್ರಕಟಿಸಲಾಗುತ್ತಿದೆ. ಇದು ಸ್ವಾಗತಾರ್ಹ ಬೆಳವಣಿಗೆಯಾಗಿದ್ದು, ಪತ್ರಕರ್ತರು ವಸ್ತುನಿಷ್ಠತೆ ಕಾಪಾಡಿಕೊಂಡು ಸಮಾಜದ ಹಿತದೃಷ್ಟಿಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಸಮಾಜದಲ್ಲಿ ಶಾಂತಿ ಸ್ಥಾಪನೆಗೆ ಪಾರದರ್ಶಕ ವರದಿಗಾರಿಕೆ ಅತ್ಯಗತ್ಯವಾಗಿದೆ. ಕೋಮು ಸೌಹಾರ್ದ ಕಾಪಾಡುವಲ್ಲಿ ಮಾಧ್ಯಮದ ಪಾತ್ರ ಮಹತ್ವದ್ದಾಗಿದ್ದು, ಸಣ್ಣಪುಟ್ಟ ಘಟನೆಗಳ ಸಂದರ್ಭದಲ್ಲಿಯೂ ಜವಾಬ್ದಾರಿಯುತ ವರದಿಗಾರಿಕೆ ಅಗತ್ಯವಾಗಿದೆ. ಅಪರಾಧ ಪ್ರಕರಣಗಳು ವ್ಯಾಪಾರ, ರಾಜಕೀಯ ಸೇರಿದಂತೆ ಹಲವು ಕ್ಷೇತ್ರಗಳ ಮೇಲೆ ಪರಿಣಾಮ ಬೀರುವುದರಿಂದ, ಅವುಗಳ ವರದಿಯಲ್ಲಿ ಎಚ್ಚರಿಕೆ ವಹಿಸಬೇಕು. ಅಪರಾಧಿಗಳು ಎಷ್ಟೇ ಚಾಲಾಕಿತನದಿಂದ ವರ್ತಿಸಿದರೂ ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅರಣ್ಯ ಸಂರಕ್ಷಣಾಕಾರಿ ಡಾ. ವಿ. ಕರಿಕಾಲನ್ ಮಾತನಾಡಿ, ಪತ್ರಕರ್ತರು ಸಮಾಜವನ್ನು ಎಚ್ಚರಿಸುವ ಹಾಗೂ ಪ್ರಜಾಪ್ರಭುತ್ವವನ್ನು ಬಲಪಡಿಸುವ ಕಾರ್ಯವನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕರಾವಳಿಯ ಯುವಕರು ಉತ್ತಮ ಶಿಕ್ಷಣ ಪಡೆದಿದ್ದರೂ ಸಾರ್ವಜನಿಕ ಸೇವೆಗೆ ಹೆಚ್ಚಿನ ಸಂಖ್ಯೆಯಲ್ಲಿ ಮುಂದೆ ಬರಬೇಕು. ಲೋಕಸೇವಾ ಆಯೋಗ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಜನಸೇವೆಗೆ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಪತ್ರಿಕಾ ದಿನದ ವಿಶೇಷ ಉಪನ್ಯಾಸ ನೀಡಿದ ನ್ಯೂಸ್-18 ಪ್ರಧಾನ ಸಂಪಾದಕ ಹರಿಪ್ರಸಾದ್ ಅಡ್ಪಂಗಾಯ, ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಸುಳ್ಳು ಸುದ್ದಿಗಳು ವೇಗವಾಗಿ ಹರಡುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಗಾಸಿಪ್ ಹಾಗೂ ಸುಳ್ಳು ಸುದ್ದಿಗಳನ್ನು ತಡೆಯುವುದು ಪತ್ರಕರ್ತರ ಪ್ರಮುಖ ಜವಾಬ್ದಾರಿಯಾಗಿದೆ. ಜಾತಿ, ಧರ್ಮ ಆಧಾರಿತ ವೈಭವೀಕರಣದಿಂದ ದೂರವಿದ್ದು, ನಿಷ್ಪಕ್ಷಪಾತ ಹಾಗೂ ಪಾರದರ್ಶಕ ವರದಿಗಾರಿಕೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು.

1843ರ ಜುಲೈ 1ರಂದು ಕ್ರೈಸ್ತ ಮಿಷನರಿ ರೆವರೆಂಡ್ ಹರ್ಮನ್ ಮೊಗ್ಲಿಂಗ್ ಕನ್ನಡದ ಮೊದಲ ಪತ್ರಿಕೆ ‘ಮಂಗಳೂರು ಸಮಾಚಾರ’ ಆರಂಭಿಸಿದ ಐತಿಹಾಸಿಕ ದಿನದ ನೆನಪಿನಲ್ಲಿ ಪತ್ರಿಕಾ ದಿನ ಆಚರಿಸಲಾಗುತ್ತಿದೆ. ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಮಾಧ್ಯಮವು ಸತ್ಯವನ್ನು ಸಮಾಜದ ಮುಂದಿಡುವ ಮೂಲಕ ಪ್ರಜಾಪ್ರಭುತ್ವವನ್ನು ಮತ್ತಷ್ಟು ಸಶಕ್ತಗೊಳಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ವಹಿಸಿದ್ದರು. ಹಿರಿಯ ಪತ್ರಿಕಾ ವಿತರಕ ತಿಮ್ಮಪ್ಪ ಶೆಟ್ಟಿಯವರನ್ನು ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಸನ್ಮಾನಿಸಿದರು. ಇದೇ ಸಂದರ್ಭದಲ್ಲಿ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು.

ವೇದಿಕೆಯಲ್ಲಿ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ. ಪೂಜಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರದ ವಿವರಗಳನ್ನು ವಿಜಯ ಕೋಟ್ಯಾನ್ ಪಡು ನೀಡಿದರು. ಉಪಾಧ್ಯಕ್ಷ ಆರಿಫ್ ಪಡುಬಿದ್ರೆ ಕಾರ್ಯಕ್ರಮ ನಿರೂಪಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!