ಪ್ರತಿಭಾ ಪುರಸ್ಕಾರ ವಿದ್ಯಾರ್ಥಿಗಳಿಗೆ ಮತ್ತಷ್ಟು ಸಾಧನೆಗೆ ಪ್ರೇರಣೆ: ಡಾ. ಎಂ.ಎನ್. ರಾಜೇಂದ್ರ ಕುಮಾರ್

ಮಂಗಳೂರು, ಜು. 4: “ಸಹಕಾರಿ ಪಿತಾಮಹ” ದಿ. ಮೊಳಹಳ್ಳಿ ಶಿವರಾವ್ ಅವರ ಸ್ಮರಣಾರ್ಥ ಎಸ್‌ಸಿಡಿಸಿಸಿ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿವೇತನ ವಿತರಣಾ ಸಮಾರಂಭವು ಶನಿವಾರ ನಗರದ ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯ ಮೊಳಹಳ್ಳಿ ಶಿವರಾವ್ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ವಿದ್ಯಾರ್ಥಿಗಳು ಉತ್ತಮ ಶಿಕ್ಷಣದ ಮೂಲಕ ಸಮಾಜಸೇವೆಯಲ್ಲೂ ತೊಡಗಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಪ್ರತಿಭಾವಂತರನ್ನು ಪ್ರೋತ್ಸಾಹಿಸುವ ಕಾರ್ಯಕ್ರಮವನ್ನು ಬ್ಯಾಂಕ್ ನಿರಂತರವಾಗಿ ಆಯೋಜಿಸುತ್ತಿದೆ ಎಂದು ಹೇಳಿದರು.

ನವೋದಯ ಗ್ರಾಮ ವಿಕಾಸ ಯೋಜನೆಯಡಿ ಶೇ.90ರಷ್ಟು ಮಹಿಳೆಯರು ಸ್ವಾವಲಂಬಿ ಜೀವನ ನಡೆಸುತ್ತಿದ್ದು, ಸಮಾಜದ ಅಭಿವೃದ್ಧಿಗೆ ಯೋಜನೆ ಮಹತ್ವದ ಕೊಡುಗೆ ನೀಡುತ್ತಿದೆ. ಪುರಸ್ಕಾರ ಸ್ವೀಕರಿಸಿದ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ. ಅವರು ದೇಶ ನಿರ್ಮಾಣದ ಕಾರ್ಯದಲ್ಲಿ ತೊಡಗಿಕೊಳ್ಳುವ ಜತೆಗೆ ಮುಂದಿನ ದಿನಗಳಲ್ಲಿ ಕನಿಷ್ಠ ಇಬ್ಬರು ವಿದ್ಯಾರ್ಥಿಗಳಿಗಾದರೂ ನೆರವಾಗುವ ಮನೋಭಾವ ಬೆಳೆಸಿಕೊಂಡರೆ ನಮ್ಮ ಶ್ರಮ ಸಾರ್ಥಕವಾಗುತ್ತದೆ ಎಂದು ಆಶಿಸಿದರು.

2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಬ್ಯಾಂಕಿನ ಸಿಬ್ಬಂದಿಗಳ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನ ವಿತರಿಸಿ ಮಾತನಾಡಿದ ಮಾಜಿ ಸಚಿವ ಜೆ. ಕೃಷ್ಣ ಪಾಲೇಮಾರ್, ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳು ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗುತ್ತವೆ. ವಿದ್ಯಾರ್ಥಿಗಳು ಸಮಾಜ ಹಾಗೂ ದೇಶದ ಅಮೂಲ್ಯ ಆಸ್ತಿಗಳಾಗಿ ಬೆಳೆಯಬೇಕು ಎಂಬ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಸಹಕಾರಿ ಕ್ಷೇತ್ರದಲ್ಲಿ ನೀಡುತ್ತಿರುವ ಜನಪರ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳು ಶ್ಲಾಘನೀಯವಾಗಿದ್ದು, ರಾಜ್ಯಕ್ಕೇ ಮಾದರಿಯಾಗುವ ರೀತಿಯಲ್ಲಿ ಸಹಕಾರಿ ಕ್ಷೇತ್ರವನ್ನು ಮುನ್ನಡೆಸುತ್ತಿದ್ದಾರೆ. ಶಿಕ್ಷಣ ಮಾತ್ರವಲ್ಲದೆ ವಿವಿಧ ಕ್ಷೇತ್ರಗಳ ಪ್ರತಿಭೆಗಳನ್ನು ಗುರುತಿಸಿ ಗೌರವಿಸುವ ಮೂಲಕ ಇತರ ಸಂಸ್ಥೆಗಳಿಗೂ ಮಾದರಿಯಾಗಿದ್ದಾರೆ ಎಂದು ಪ್ರಶಂಸಿಸಿದರು.

ಕಾರ್ಯಕ್ರಮದಲ್ಲಿ ಬ್ಯಾಂಕ್ ಉಪಾಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಬೆಳಪು, ನಿರ್ದೇಶಕರಾದ ವಿನಯ್ ಕುಮಾರ್ ಸೂರಿಂಜೆ, ಭಾಸ್ಕರ್ ಕೋಟ್ಯಾನ್, ವ್ಯವಸ್ಥಾಪಕ ನಿರ್ದೇಶಕ ಗೋಪಿನಾಥ್ ಭಟ್, ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಪ್ರವೀಣ್ ನಾಯ್ಕ್, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಯೋಗ ಪ್ರತಿಭೆ ತನುಶ್ರೀ ಪಿತ್ರೋಡಿ ಅವರಿಂದ ಯೋಗ ಪ್ರದರ್ಶನ ನಡೆಯಿತು. ಚಿತ್ರಲೇಖ ಶೆಟ್ಟಿ ಪ್ರಾರ್ಥಿಸಿದರು. ರಾಜೇಶ್ ಶೆಟ್ಟಿ ವಂದಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!