ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್.ಡಿ.ಟಿ.ಯು) ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಮಾಸಿಕ ಸಭೆಯು ಜುಲೈ 9, 2026ರಂದು ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಜಿಲ್ಲಾ ಉಪಾಧ್ಯಕ್ಷರಾದ ಹೆನ್ರಿ ಡಿ.ಸೋಜಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಂಘಟನೆಯ ಚಟುವಟಿಕೆಗಳು, ಅಸಂಘಟಿತ ಕಾರ್ಮಿಕರ ಸಮಸ್ಯೆಗಳು ಹಾಗೂ ಮುಂದಿನ ದಿನಗಳ ಕಾರ್ಯಯೋಜನೆ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಎಸ್.ಡಿ.ಟಿ.ಯು ಕರ್ನಾಟಕದ ರಾಜ್ಯಾಧ್ಯಕ್ಷರಾದ ಅಥಾವುಲ್ಲಾ ಜೋಕಟ್ಟೆ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಲೀಂ ಜಿ.ಕೆ. ಗುರುವಾಯನಕೆರೆ, ರಾಜ್ಯ ಸಮಿತಿ ಸದಸ್ಯರಾದ ಅಬ್ದುಲ್ ಹಮೀದ್ ಸಾಲ್ಮರ ಹಾಗೂ ಅಬೂಬಕ್ಕರ್ ಮದ್ದ ಅವರನ್ನು ಜಿಲ್ಲಾ ಸಮಿತಿಯ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಜ್ಯ ನಾಯಕರು, ಅಸಂಘಟಿತ ಕಾರ್ಮಿಕರನ್ನು ಸಂಘಟಿಸಿ ಅವರ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಒತ್ತು ನೀಡುವಂತೆ ಕರೆ ನೀಡಿದರು. ಕಾರ್ಮಿಕರ ಪರ ಹೋರಾಟಗಳನ್ನು ಮತ್ತಷ್ಟು ಬಲಪಡಿಸಲು ಜಿಲ್ಲಾ ಮಟ್ಟದಲ್ಲಿ ಸಂಘಟನೆಯನ್ನು ಸದೃಢಗೊಳಿಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.


ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಲೀಂ ಆಲಾಡಿ, ಜಿಲ್ಲಾ ಸಮಿತಿ ಸದಸ್ಯರಾದ ಅಬ್ದುಲ್ ಹಮೀದ್ ಕೆ.ಎಸ್., ಅಝೀಝ್ ಉಪ್ಪಿನಂಗಡಿ, ಹನೀಫ್ ನೆಲ್ಯಾಡಿ ಸೇರಿದಂತೆ ಜಿಲ್ಲಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

