11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಶಾಹುಲ್ ಹಮೀದ್ ಬಂಧನ

ಮಂಗಳೂರು, ಜುಲೈ 14: ಮಂಗಳೂರಿನ ಕಾಂಚನಾ ಟೆಕ್ಸ್‌ಟೈಲ್ಸ್ ಮ್ಯಾನೇಜರ್ ದಿನೇಶ್ ರಾಜ್ ಕೊಲೆ ಪ್ರಕರಣ ಸೇರಿದಂತೆ ಒಟ್ಟು ಆರು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಕಳೆದ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಶಾಹುಲ್ ಹಮೀದ್ ಎಂಬಾತನನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ವಿರುದ್ಧ ದಿನೇಶ್ ರಾಜ್ ಕೊಲೆ ಪ್ರಕರಣ ಸೇರಿದಂತೆ ಮೂರು ಪ್ರಮುಖ ಪ್ರಕರಣಗಳಲ್ಲಿ ನ್ಯಾಯಾಲಯ ಈಗಾಗಲೇ ದಸ್ತಗಿರಿ ವಾರಂಟ್ ಜಾರಿಗೊಳಿಸಿತ್ತು. ಶಾಹುಲ್ ಹಮೀದ್ ವಿರುದ್ಧ ಅಪಹರಣ, ಸುಲಿಗೆ, ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ, ಕೊಲೆ ಯತ್ನ ಸೇರಿದಂತೆ ಹಲವು ಗಂಭೀರ ಪ್ರಕರಣಗಳು ದಾಖಲಾಗಿವೆ.

ಪೊಲೀಸರ ಮಾಹಿತಿಯಂತೆ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮೂರು, ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಒಂದು, ಉತ್ತರ (ಬಂದರು) ಪೊಲೀಸ್ ಠಾಣೆಯಲ್ಲಿ ಒಂದು ಹಾಗೂ ಬರ್ಕೆ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ಸೇರಿದಂತೆ ಒಟ್ಟು ಆರು ಪ್ರಕರಣಗಳು ಈತನ ವಿರುದ್ಧ ದಾಖಲಾಗಿವೆ.

ಬರ್ಕೆ ಪೊಲೀಸ್ ಠಾಣೆಯ ಕೊಲೆ ಯತ್ನ ಪ್ರಕರಣದಲ್ಲಿ ಜೈಲಿನಲ್ಲಿದ್ದ ಸಂದರ್ಭದಲ್ಲಿಯೇ ಶಶಿಕಿರಣ್ ಎಂಬಾತನ ಕೊಲೆಗೆ ಯತ್ನಿಸಿದ ಆರೋಪವೂ ಶಾಹುಲ್ ಹಮೀದ್ ವಿರುದ್ಧವಿದೆ. ಈ ಹಿಂದೆ ನರಸಿಂಹ ಶೆಟ್ಟಿಗಾರ್ ಹಾಗೂ ಪೊಳಲಿ ಅನಂತಮೂರ್ತಿ ಕೊಲೆ ಪ್ರಕರಣಗಳಲ್ಲೂ ಆರೋಪಿಯಾಗಿದ್ದರೂ, ಬಳಿಕ ನ್ಯಾಯಾಲಯದಿಂದ ಖುಲಾಸೆಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯಾಯಾಲಯದ ಆದೇಶ ಉಲ್ಲಂಘನೆಗೆ ಮತ್ತೊಂದು ಪ್ರಕರಣ

ಕಳೆದ 11 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಶಾಹುಲ್ ಹಮೀದ್ ವಿರುದ್ಧ ನ್ಯಾಯಾಲಯ ಹಲವು ಬಾರಿ ವಾರಂಟ್ ಹಾಗೂ ಪ್ರಖ್ಯಾಪನೆಗಳನ್ನು ಹೊರಡಿಸಿತ್ತು. ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಪರಾರಿಯಾಗಿದ್ದ ಹಿನ್ನೆಲೆಯಲ್ಲಿ ಆರೋಪಿ ವಿರುದ್ಧ ಮತ್ತೊಂದು ಹೊಸ ಪ್ರಕರಣ ದಾಖಲಿಸಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಪ್ರಸ್ತುತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಪ್ರಕರಣಗಳ ಕುರಿತು ಸಿಸಿಬಿ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!