ರಾಮ ಮಂದಿರ ಕಾಣಿಕೆ ಹಗರಣದ ಸಮಗ್ರ ತನಿಖೆಗೆ ಆಗ್ರಹ: ವಿನಯ್ ಕುಮಾರ್ ಸೊರಕೆ

ಮಂಗಳೂರು: ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿರುವ ಎನ್ನಲಾದ ಕಾಣಿಕೆ ಕಳ್ಳತನ ಪ್ರಕರಣವು ದೇಶದ ಕೋಟ್ಯಂತರ ಭಕ್ತರ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ್ದು, ಪ್ರಕರಣದ ಸಮಗ್ರ ತನಿಖೆ ನಡೆಸಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಆಗ್ರಹಿಸಿದರು.

ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮ ಮಂದಿರ ಟ್ರಸ್ಟ್‌ನಲ್ಲಿ ಆರ್‌ಎಸ್‌ಎಸ್ ಹಾಗೂ ಬಿಜೆಪಿ ಹಿನ್ನೆಲೆಯವರನ್ನು ನೇಮಕ ಮಾಡಲಾಗಿದ್ದು, ಭಕ್ತರು ಸಮರ್ಪಿಸಿದ ಬಂಗಾರ, ಬೆಳ್ಳಿ ಹಾಗೂ ಕಾಣಿಕೆಗಳ ದುರುಪಯೋಗ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ ಎಂದು ಹೇಳಿದರು. ಈ ಪ್ರಕರಣದ ಕುರಿತು ಪಾರದರ್ಶಕ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರ ವಿರುದ್ಧ ಘೋಷಣೆಗಳನ್ನು ನೀಡಿದ್ದರೂ, ಈ ಪ್ರಕರಣದಲ್ಲಿ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಿದ ಸೊರಕೆ, ಉತ್ತರ ಪ್ರದೇಶ ಸರ್ಕಾರದ ಎಸ್‌ಐಟಿ ತನಿಖೆಯ ವಿಶ್ವಾಸಾರ್ಹತೆಯ ಬಗ್ಗೆಯೂ ಪ್ರಶ್ನೆ ಎತ್ತಿದರು.ರಾಮ ಮಂದಿರ ಟ್ರಸ್ಟ್ ಅನ್ನು ತಕ್ಷಣ ವಜಾಗೊಳಿಸಿ, ಶಂಕರಾಚಾರ್ಯರು ಹಾಗೂ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರನ್ನು ಒಳಗೊಂಡ ಹೊಸ ಟ್ರಸ್ಟ್ ರಚಿಸಬೇಕು. ಜೊತೆಗೆ ಸಿಬಿಐ ಅಥವಾ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರ ಉಸ್ತುವಾರಿಯಲ್ಲಿ ಪ್ರಕರಣದ ಸಮಗ್ರ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಸುಧೀರ್ ಕುಮಾರ್ ಮುರೋಳಿ, ಹರೀಶ್ ಕುಮಾರ್, ಜೆ.ಆರ್. ಲೋಬೊ ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!