ಬರ ಪರಿಸ್ಥಿತಿ ನಿರ್ವಹಣೆಗೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಲಿ: ಜೆಡಿಎಸ್ ಎಂ ಎಲ್‌ ಸಿ ಎಸ್.ಎಲ್. ಬೋಜೇಗೌಡ

ಮಂಗಳೂರು:ರಾಜ್ಯದಲ್ಲಿ ಮಳೆ ಕೊರತೆಯಿಂದ ಬರದ ಆತಂಕ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಬೋಜೇಗೌಡ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಜವಾಬ್ದಾರಿಯ ಹಿನ್ನೆಲೆಯಲ್ಲಿ ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳ ಪ್ರವಾಸ ಕೈಗೊಂಡಿರುವುದಾಗಿ ತಿಳಿಸಿದರು.

ರಾಜ್ಯ ಸರ್ಕಾರ ಇದುವರೆಗೆ ಯಾವುದೇ ತಾಲೂಕು ಅಥವಾ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿಲ್ಲ. ಶ್ರಾವಣ ಮಾಸದವರೆಗೆ ಮಳೆಯ ಸ್ಥಿತಿಗತಿಯನ್ನು ಗಮನಿಸಬೇಕಾದ ಅಗತ್ಯವಿದ್ದರೂ, ಈಗಾಗಲೇ ರಾಜ್ಯದ ಹಲವೆಡೆ ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.

ಮಳೆ ಕೊರತೆಯಿಂದ ರಾಜ್ಯಾದ್ಯಂತ ಭತ್ತ, ರಾಗಿ, ದ್ವಿದಳ ಧಾನ್ಯಗಳು ಸೇರಿದಂತೆ ವಿವಿಧ ಬೆಳೆಗಳ ಬಿತ್ತನೆ ಸಮರ್ಪಕವಾಗಿ ನಡೆದಿಲ್ಲ. ಕಳೆದ ವರ್ಷ ಇದೇ ಅವಧಿಯಲ್ಲಿ ಬಹುತೇಕ ಜಲಾಶಯಗಳು ಭರ್ತಿಯಾಗಿ ಹರಿಯುತ್ತಿದ್ದರೆ, ಈ ಬಾರಿ ರಾಜ್ಯದ ಅನೇಕ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿದಿದೆ ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ಬೆಂಗಳೂರು ಸೇರಿದಂತೆ ಹಲವು ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಾಗುವ ಸಾಧ್ಯತೆ ಇದ್ದು, ಗ್ರಾಮೀಣ ಪ್ರದೇಶಗಳ ಪರಿಸ್ಥಿತಿ ಇನ್ನಷ್ಟು ಸಂಕಷ್ಟಕರವಾಗುವ ಆತಂಕವಿದೆ ಎಂದು ಎಚ್ಚರಿಸಿದರು.

ಬರದ ಸಾಧ್ಯತೆಯನ್ನು ಮನಗಂಡು ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕಾಗಿತ್ತು. ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಬರ ನಿರ್ವಹಣಾ ಸಮಿತಿಗಳನ್ನು ರಚಿಸಿ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಅಗತ್ಯ ಕಾರ್ಯಯೋಜನೆ ರೂಪಿಸಬೇಕಾಗಿದ್ದರೂ, ಈ ದಿಸೆಯಲ್ಲಿ ಯಾವುದೇ ಕ್ರಮ ಕೈಗೊಳ್ಳದಿರುವುದು ಸರ್ಕಾರದ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಟೀಕಿಸಿದರು.

ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರಕ್ಕೆ ಬರ ಪರಿಸ್ಥಿತಿ ಅಧ್ಯಯನಕ್ಕಾಗಿ ತಜ್ಞರ ತಂಡ ಕಳುಹಿಸುವಂತೆ ಪತ್ರ ಬರೆದಿರುವುದನ್ನು ಸ್ವಾಗತಿಸಿದ ಅವರು, ಕೇಂದ್ರದ ತಂಡ ಬರುವವರೆಗೆ ರಾಜ್ಯ ಸರ್ಕಾರ ಕೈಕಟ್ಟಿ ಕುಳಿತುಕೊಳ್ಳದೆ, ತನ್ನದೇ ಆದ ಬರ ಅಧ್ಯಯನ ಸಮಿತಿಯನ್ನು ರಚಿಸಿ ಜಿಲ್ಲಾಧಿಕಾರಿಗಳ ಮೂಲಕ ಬೆಳೆ ಹಾನಿ, ನೀರಿನ ಲಭ್ಯತೆ ಹಾಗೂ ವಾಸ್ತವ ಪರಿಸ್ಥಿತಿಯ ಸಮಗ್ರ ವರದಿ ಸಿದ್ಧಪಡಿಸಿ ಕೇಂದ್ರಕ್ಕೆ ಸಲ್ಲಿಸಬೇಕು ಎಂದು ಒತ್ತಾಯಿಸಿದರು.

ಮಳೆ ಕೊರತೆಯಿಂದ ರಾಜ್ಯದ ಹಲವು ಭಾಗಗಳಲ್ಲಿ ಇನ್ನೂ ಬೆಳೆ ಬಿತ್ತನೆ ಪೂರ್ಣಗೊಂಡಿಲ್ಲ. ಈ ಹಿಂದೆ ಯೂರಿಯಾ ಗೊಬ್ಬರದ ಕೊರತೆಯ ಕುರಿತು ಚರ್ಚೆಯಾಗಿದ್ದರೂ, ಈಗ ಮಳೆಯೇ ಇಲ್ಲದ ಕಾರಣ ಗೊಬ್ಬರದ ಬೇಡಿಕೆಯೂ ಕುಂಠಿತವಾಗಿದೆ. ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ತಕ್ಷಣ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹಾಗೂ ಉಡುಪಿ ಭಾಗಗಳಲ್ಲಿಯೂ ನೀರಿನ ಸಮಸ್ಯೆಯ ಲಕ್ಷಣಗಳು ಗೋಚರಿಸುತ್ತಿವೆ. ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದ್ದು, ಕಡಲ್ಕೊರೆತ, ತಡೆಗೋಡೆ ಕುಸಿತ ಸೇರಿದಂತೆ ವಿವಿಧ ಸ್ಥಳೀಯ ಸಮಸ್ಯೆಗಳಿಗೂ ಸರ್ಕಾರ ಆದ್ಯತೆ ನೀಡಿ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಬೋಜೇಗೌಡ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಮುಖಂಡರಾದ ಶಶಿರಾಜ್ ಶೆಟ್ಟಿ ಕೊಳಂಬೆ, ಅಕ್ಷಯ್ ಸುವರ್ಣ, ಜಾಕೆ ಮಾಧವ ಗೌಡ, ವಿಲ್ಸೆಂಟ್, ಯೋಗೀಶ್ ಶೆಟ್ಟಿ ಜೆಪ್ಪು ಹಾಗೂ ಇತರರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!