ಬಂಟ್ವಾಳ ಕೆಎಸ್‌ಆರ್‌ಟಿಸಿ ಹೊಸ ಬಸ್ ನಿಲ್ದಾಣದ ಸಮೀಪ ಬಸ್‌ಗಾಗಿ ಕಾಯುತ್ತಿದ್ದ ಯುವತಿಯೊಬ್ಬಳ ಮೇಲೆ ಅಪರಿಚಿತ ಯುವಕನೋರ್ವ ಹರಿತವಾದ ಆಯುಧದಿಂದ ದಾಳಿ ನಡೆಸಿದ ಪರಿಣಾಮ, ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತಪಟ್ಟಿರುವ ದುರ್ಘಟನೆ ಗುರುವಾರ ಸಂಜೆ ನಡೆದಿದೆ.

ಮೃತ ಯುವತಿ ಕಕ್ಯಪದವು ಗ್ರಾಮದ ನಿವಾಸಿಯಾಗಿದ್ದು, ದಾಳಿ ನಡೆದ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸ್ಥಳೀಯರು ತಕ್ಷಣವೇ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.


ಪ್ರಾಥಮಿಕ ತನಿಖೆಯಲ್ಲಿ ಆರೋಪಿಯನ್ನು ಚೇತನ್ ಎಂದು ಗುರುತಿಸಲಾಗಿದ್ದು, ಆತ ಮೃತ ಯುವತಿಯ ದೂರದ ಸಂಬಂಧಿಯಾಗಿರುವುದು ತಿಳಿದುಬಂದಿದೆ. ಅಲ್ಲದೆ, ಆತ ಯುವತಿಯನ್ನು ಏಕಪಕ್ಷೀಯವಾಗಿ ಪ್ರೀತಿಸುತ್ತಿದ್ದು, ಇದೇ ಕಾರಣಕ್ಕೆ ಕೃತ್ಯ ಎಸಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಬಂಟ್ವಾಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯ ಬಂಧನಕ್ಕಾಗಿ ವಿಶೇಷ ತಂಡವನ್ನು ರಚಿಸಿ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ಪ್ರಕರಣದ ನಿಖರ ಕಾರಣ ಹಾಗೂ ಇತರ ಆಯಾಮಗಳ ಕುರಿತು ತನಿಖೆ ಮುಂದುವರಿದಿದೆ.


