ಎಸ್.ಡಿ.ಟಿ.ಯು ಮಂಗಳೂರು ನಗರ ಜಿಲ್ಲಾ ಸಮಿತಿಯ ಮಾಸಿಕ ಸಭೆ ರಾಜ್ಯ ಉಪಾಧ್ಯಕ್ಷ ವಿಕ್ಟರ್ ಮಾರ್ಟಿಸ್ ಭಾಗಿ – ರಾಜ್ಯ ಸಮಿತಿ ಸದಸ್ಯರಾಗಿ ಆಯ್ಕೆಯಾದ ರಹಿಮಾನ್ ಬೋಳಿಯಾರ್‌ಗೆ ಸನ್ಮಾನ

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್.ಡಿ.ಟಿ.ಯು) ಮಂಗಳೂರು ನಗರ ಜಿಲ್ಲಾ ಸಮಿತಿಯ ಮಾಸಿಕ ಸಭೆಯು ಜಿಲ್ಲಾಧ್ಯಕ್ಷ ರಹಿಮಾನ್ ಬೋಳಿಯಾರ್ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾ ಕಚೇರಿಯಲ್ಲಿ ನಡೆಯಿತು.

ಸಭೆಯಲ್ಲಿ ಎಸ್.ಡಿ.ಟಿ.ಯು ಕರ್ನಾಟಕ ರಾಜ್ಯ ಉಪಾಧ್ಯಕ್ಷರು ಹಾಗೂ ನೂತನ ಜಿಲ್ಲಾ ಉಸ್ತುವಾರಿಯಾದ ವಿಕ್ಟರ್ ಮಾರ್ಟಿಸ್ ಅವರು ವೀಕ್ಷಕರಾಗಿ ಭಾಗವಹಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಸಮಿತಿಯ ವತಿಯಿಂದ ಅವರಿಗೆ ಹೂಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಲಾಯಿತು.

ಬಳಿಕ ಮಾತನಾಡಿದ ವಿಕ್ಟರ್ ಮಾರ್ಟಿಸ್, ಸಂಘಟನೆಯ ಬಲವರ್ಧನೆ, ಅಸಂಘಟಿತ ಕಾರ್ಮಿಕರ ಹಕ್ಕುಗಳ ರಕ್ಷಣೆ, ಸದಸ್ಯತ್ವ ವಿಸ್ತರಣೆ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಹೋರಾಟ ಮತ್ತು ಸಂಘಟನಾ ಕಾರ್ಯಕ್ರಮಗಳ ಕುರಿತು ಮಾರ್ಗದರ್ಶನ ನೀಡಿದರು. ಜಿಲ್ಲಾ ಸಮಿತಿಯ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿದ ಅವರು, ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕಾಗಿ ಸಂಘಟನೆಯು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ, 2026–29ನೇ ಸಾಲಿನ ಎಸ್.ಡಿ.ಟಿ.ಯು ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾಗಿ ಆಯ್ಕೆಯಾದ ರಹಿಮಾನ್ ಬೋಳಿಯಾರ್ ಅವರನ್ನು ಜಿಲ್ಲಾ ಸಮಿತಿಯ ವತಿಯಿಂದ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ರಹಿಮಾನ್ ಬೋಳಿಯಾರ್, ತಮ್ಮನ್ನು ರಾಜ್ಯ ಸಮಿತಿಗೆ ಆಯ್ಕೆ ಮಾಡಿರುವ ಸಂಘಟನೆಯ ರಾಜ್ಯ ನಾಯಕತ್ವಕ್ಕೆ ಹಾಗೂ ತಮ್ಮ ಮೇಲೆ ವಿಶ್ವಾಸವಿಟ್ಟು ಅಭಿನಂದಿಸಿರುವ ಮಂಗಳೂರು ನಗರ ಜಿಲ್ಲಾ ಸಮಿತಿಯ ಎಲ್ಲಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು. ರಾಜ್ಯ ಸಮಿತಿ ಸದಸ್ಯನಾಗಿ ಕಾರ್ಮಿಕರ ಹಕ್ಕುಗಳ ರಕ್ಷಣೆ, ಅಸಂಘಟಿತ ಕಾರ್ಮಿಕರ ಸಂಘಟನೆ ಮತ್ತು ಎಸ್.ಡಿ.ಟಿ.ಯು ಸಂಘಟನೆಯನ್ನು ಇನ್ನಷ್ಟು ಬಲಿಷ್ಠಗೊಳಿಸಲು ಬದ್ಧತೆಯಿಂದ ಕಾರ್ಯನಿರ್ವಹಿಸುವುದಾಗಿ ಅವರು ಹೇಳಿದರು.

ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ಇರ್ಫಾನ್ ಕಾನ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಬೆಂಗರೆ, ಜಿಲ್ಲಾ ಕೋಶಾಧಿಕಾರಿ ಝುಬೈರ್ ಮಳಲಿ, ಸಮಿತಿ ಸದಸ್ಯ ರಹೀಂ ಮುಲ್ಕಿ, ಮುಲ್ಕಿ ತಾಲೂಕು ಸಮಿತಿ ಅಧ್ಯಕ್ಷ ವಿಶುಕುಮಾರ್, ಮಂಗಳೂರು ನಗರ ತಾಲೂಕು ಸಮಿತಿ ಅಧ್ಯಕ್ಷ ಇಕ್ಬಾಲ್ ಬಿ.ಪಿ., ತಾಲೂಕು ಉಪಾಧ್ಯಕ್ಷ ಮುಸ್ತಫಾ ಪರ್ಲಿಯಾ, ತಾಲೂಕು ಕೋಶಾಧಿಕಾರಿ ಶರೀಫ್ ಕುತ್ತಾರ್, ಮುಲ್ಕಿ ತಾಲೂಕು ಸಮಿತಿ ಕಾರ್ಯದರ್ಶಿ ಸಾಅಲಂ ಹಾಗೂ ವಿವಿಧ ಘಟಕಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!