ಮಂಗಳೂರು, ಜು. 18: ನಗರದ ಉರ್ವಾ ಸ್ಟೋರ್ ಸಮೀಪದ ಸುಂಕದಕಟ್ಟೆ ಪ್ರದೇಶದಲ್ಲಿ ಕುಡಿಯುವ ನೀರಿನ ಅಸಮರ್ಪಕ ಪೂರೈಕೆಯಿಂದ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಅವರು ಶನಿವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸ್ಥಳೀಯ ನಿವಾಸಿಗಳಿಂದ ಅಹವಾಲು ಸ್ವೀಕರಿಸಿದ ಅವರು, ನೀರು ಸರಬರಾಜು ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ಚರ್ಚಿಸಿ ಸಮಸ್ಯೆಗೆ ತ್ವರಿತ ಪರಿಹಾರ ಕಲ್ಪಿಸುವಂತೆ ಸೂಚಿಸಿದರು.
ಈ ವೇಳೆ ಸಾರ್ವಜನಿಕರು, ನಿರಂತರ ಮಳೆಯಾಗುತ್ತಿದ್ದರೂ ಪ್ರದೇಶದಲ್ಲಿ ಕುಡಿಯುವ ನೀರನ್ನು ರೇಷನಿಂಗ್ ಪದ್ಧತಿಯಲ್ಲಿ ಮಾತ್ರ ಪೂರೈಸಲಾಗುತ್ತಿದೆ. ಅದೂ ರಾತ್ರಿ 12ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಮಾತ್ರ ನೀರು ಬರುತ್ತಿದ್ದು, ನೀರಿನ ಒತ್ತಡವೂ ಸಮರ್ಪಕವಾಗಿಲ್ಲದ ಕಾರಣ ಅನೇಕ ಮನೆಗಳಿಗೆ ನೀರು ತಲುಪುತ್ತಿಲ್ಲ ಎಂದು ದೂರಿದರು. ಉದ್ಯೋಗಕ್ಕೆ ತೆರಳುವವರು ಹಾಗೂ ಚಿಕ್ಕ ಮಕ್ಕಳಿರುವ ಕುಟುಂಬಗಳು ಇದರಿಂದ ತೀವ್ರ ಸಂಕಷ್ಟ ಅನುಭವಿಸುತ್ತಿವೆ ಎಂದು ತಿಳಿಸಿದರು.

ಪೂರೈಕೆಯಾಗುತ್ತಿರುವ ನೀರಿನ ಗುಣಮಟ್ಟವೂ ತೃಪ್ತಿಕರವಾಗಿಲ್ಲ. ಬೋರ್‌ವೆಲ್ ನೀರನ್ನೇ ಪೂರೈಸಲಾಗುತ್ತಿದ್ದು, ಶುದ್ಧ ಕುಡಿಯುವ ನೀರು ದೊರೆಯುತ್ತಿಲ್ಲ ಎಂದು ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿ, ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿದರು.
ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ ಐವನ್ ಡಿ’ಸೋಜಾ, ಉರ್ವಾ ಸುಂಕದಕಟ್ಟೆ ಪ್ರದೇಶದ ನಿವಾಸಿಗಳಿಗೆ ಸಾಧ್ಯವಾದಷ್ಟು 24 ಗಂಟೆಗಳ ನಿರಂತರ ಕುಡಿಯುವ ನೀರು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಅಲ್ಲದೆ, ಅನೇಕ ಮನೆಗಳಲ್ಲಿ ನೀರು ಸಂಗ್ರಹಿಸಲು ಸಂಪ್ ಅಥವಾ ಟ್ಯಾಂಕ್ ವ್ಯವಸ್ಥೆ ಇಲ್ಲದಿರುವುದರಿಂದ ಬಡ ಹಾಗೂ ಅಗತ್ಯವಿರುವ ಕುಟುಂಬಗಳಿಗೆ ಸಿಂಟೆಕ್ಸ್ ನೀರಿನ ಟ್ಯಾಂಕ್ ವಿತರಿಸುವ ಕುರಿತು ಜಿಲ್ಲಾಡಳಿತದೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.

ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಶೀಘ್ರದಲ್ಲೇ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಗುವುದು ಎಂದು ಐವನ್ ಡಿ’ಸೋಜಾ ತಿಳಿಸಿದರು.
ಪರಿಶೀಲನೆ ವೇಳೆ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಸ್ಥಳೀಯ ಮುಖಂಡ ಚೇತನ್ ಉರ್ವಾ ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

