ಮಂಗಳೂರು, ಜು. 24: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆಯ ಮುನ್ಸೂಚನೆ ನೀಡಿ ಯೆಲ್ಲೋ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾಡಳಿತವು ಜುಲೈ 24, ಶುಕ್ರವಾರ ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದೆ.

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಗುರುವಾರ ತಡರಾತ್ರಿ ಹೊರಡಿಸಿರುವ ಆದೇಶದ ಪ್ರಕಾರ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ವಸತಿ ಶಾಲೆಗಳು, ಪದವಿಪೂರ್ವ (ಪಿಯು) ಕಾಲೇಜುಗಳು ಹಾಗೂ ಪಿಯು ವಸತಿ ಕಾಲೇಜುಗಳು (12ನೇ ತರಗತಿ ವರೆಗೆ) ರಜೆ ಅನ್ವಯವಾಗಲಿದೆ.
ಈ ಆದೇಶವನ್ನು ಉಲ್ಲಂಘಿಸಿದರೆ ವಿಪತ್ತು ನಿರ್ವಹಣಾ ಕಾಯ್ದೆ-2005ರ ಕಲಂ 51(ಬಿ) ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಾರ್ವಜನಿಕರಿಗೆ ಹಾಗೂ ಅಧಿಕಾರಿಗಳಿಗೆ ಹಲವು ಮುನ್ನೆಚ್ಚರಿಕಾ ಸೂಚನೆಗಳನ್ನು ನೀಡಿದೆ. ಪೋಷಕರು ತಮ್ಮ ಮಕ್ಕಳನ್ನು ನೀರು ನಿಂತಿರುವ ತಗ್ಗು ಪ್ರದೇಶಗಳು, ಕೆರೆ, ನದಿ ತೀರ ಹಾಗೂ ಸಮುದ್ರ ತೀರಗಳಿಗೆ ತೆರಳದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ ತೀರ ಮತ್ತು ಸಮುದ್ರ ತೀರ ಪ್ರದೇಶಗಳಿಗೆ ಭೇಟಿ ನೀಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಅಲ್ಲದೆ, ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು ಎಂದು ಜಿಲ್ಲಾಡಳಿತ ಆದೇಶಿಸಿದೆ.

ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ಕೇಂದ್ರ ಸ್ಥಾನದಲ್ಲೇ ಉಳಿದು ವಿಪತ್ತು ನಿರ್ವಹಣಾ ಕರ್ತವ್ಯ ನಿರ್ವಹಿಸುವಂತೆ ಸೂಚಿಸಲಾಗಿದೆ. ಸಾರ್ವಜನಿಕರಿಂದ ಬರುವ ದೂರುಗಳಿಗೆ ತಕ್ಷಣ ಸ್ಪಂದಿಸುವುದರ ಜೊತೆಗೆ ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಎಂದು ನಿರ್ದೇಶಿಸಲಾಗಿದೆ.
ಪ್ರತಿ ತಾಲ್ಲೂಕಿನಲ್ಲಿ ಅಗತ್ಯವಿದ್ದಲ್ಲಿ ಪರಿಹಾರ ಕೇಂದ್ರಗಳನ್ನು ತೆರೆಯಲು ಹಾಗೂ ಅವುಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲು ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ನೈಸರ್ಗಿಕ ವಿಕೋಪ ಸಂಬಂಧಿತ ತುರ್ತು ಪರಿಸ್ಥಿತಿಗಳಲ್ಲಿ ಸಾರ್ವಜನಿಕರು ಟೋಲ್ ಫ್ರೀ ಸಹಾಯವಾಣಿ 1077 ಅಥವಾ ಜಿಲ್ಲಾ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 0824-2442590 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

