ಮಂಗಳೂರು, ಜು.24: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಅದರ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಆಗ್ರಹಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀಟ್ ಅಕ್ರಮ ವಿರೋಧಿಸಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಕ್ರಮ ಹಾಗೂ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ನಡೆಸಿಕೊಂಡ ರೀತಿಯನ್ನು ಖಂಡಿಸಿದರು. ಇದು ಪ್ರಜಾಪ್ರಭುತ್ವ ವಿರೋಧಿ ಮತ್ತು ಸರ್ವಾಧಿಕಾರಿ ಧೋರಣೆಯನ್ನು ಪ್ರತಿಬಿಂಬಿಸುತ್ತದೆ ಎಂದು ಆರೋಪಿಸಿದರು.

2014ರಿಂದ ಎನ್ಟಿಎ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಲವು ಬಾರಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು, ಇದರಿಂದ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ. ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಆತ್ಮಹತ್ಯೆಗಳಿಗೂ ಕೇಂದ್ರ ಸರ್ಕಾರದ ವೈಫಲ್ಯವೇ ಕಾರಣ ಎಂದು ಅವರು ದೂರಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಅಪ್ಪಿ ಟಿ.ಕೆ. ಸುಧೀರ್, ಜಯಶೀಲ ಅಡ್ಯಂತಾಯ, ಪ್ರೇಮನಾಥ್ ಹಾಗೂ ಸಮರ್ಥ ಭಟ್ ಉಪಸ್ಥಿತರಿದ್ದರು.



