ಮಂಗಳೂರು :ಕಳೆದ 12 ವರ್ಷಗಳ ಹಿಂದೆ “ಅಚ್ಛೇ ದಿನ್”, “ಬೇಟಿ ಬಚಾವೋ, ಬೇಟಿ ಪಢಾವೋ” ಹಾಗೂ “ನಾ ಖಾವೂಂಗಾ, ನಾ ಖಾನೇ ದೂಂಗಾ” ಎಂಬ ಭರವಸೆಗಳೊಂದಿಗೆ ಅಧಿಕಾರಕ್ಕೆ ಬಂದ ಕೇಂದ್ರ ಸರ್ಕಾರವು ವಿದ್ಯಾರ್ಥಿಗಳು, ಯುವಕರು ಮತ್ತು ಬಡವರ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ನವಾಝ್ ಆರೋಪಿಸಿದರು.

ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕಳೆದ ಕೆಲವು ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಪಾರದರ್ಶಕತೆ ಕುರಿತು ಪ್ರಶ್ನೆಗಳು ಕೇಳಿಬರುತ್ತಿದ್ದು, ಈ ಬಾರಿ ನೀಟ್ (NEET) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ರಾಷ್ಟ್ರವ್ಯಾಪಿ ಚರ್ಚೆಗೆ ಗ್ರಾಸವಾಗಿದೆ ಎಂದು ಹೇಳಿದರು. ಈ ಘಟನೆಗೆ ಸಂಬಂಧಿಸಿದಂತೆ ವಿವಿಧ ರಾಜ್ಯಗಳಲ್ಲಿ ವಿದ್ಯಾರ್ಥಿಗಳು ಹಾಗೂ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆ ಕುರಿತು ಆತಂಕ ವ್ಯಕ್ತವಾಗುತ್ತಿದೆ ಎಂದರು.

ಈ ವರ್ಷದ ಮೇ 3ರಂದು ನಡೆದ ನೀಟ್ ಪರೀಕ್ಷೆಗೆ ದೇಶಾದ್ಯಂತ ಸುಮಾರು 22 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಫಲಿತಾಂಶದ ನಿರೀಕ್ಷೆಯಲ್ಲಿದ್ದ ಸಂದರ್ಭದಲ್ಲಿ, ಮೇ 7ರಂದು ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪಗಳು ಬೆಳಕಿಗೆ ಬಂದಿದ್ದು, ಇದರಿಂದ ವಿದ್ಯಾರ್ಥಿಗಳಲ್ಲಿ ತೀವ್ರ ನಿರಾಸೆ ಮತ್ತು ಆತಂಕ ಉಂಟಾಗಿದೆ ಎಂದು ಹೇಳಿದರು.
ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿದ್ದು, ಮರುಪರೀಕ್ಷೆ ನಡೆಸುವುದಾಗಿ ಘೋಷಿಸಿದೆ. ಆದರೆ, ಈ ಹಗರಣ ಹೊಸದೇನಲ್ಲ. ಕಳೆದ ಕೆಲವು ವರ್ಷಗಳಿಂದ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಸಂಬಂಧಿಸಿದ ಹಲವು ಪ್ರಕರಣಗಳು ದಾಖಲಾಗಿವೆ ಎಂದು ಅವರು ಆರೋಪಿಸಿದರು.

2024ರಲ್ಲಿಯೂ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಬೆಳಕಿಗೆ ಬಂದ ನಂತರ ಕೇಂದ್ರ ಸರ್ಕಾರವು ಸಿಬಿಐ ತನಿಖೆಗೆ ಆದೇಶಿಸಿತ್ತು. ತನಿಖೆಯ ಬಳಿಕ ಹಲವು ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಕೆಯಾಗಿದ್ದರೂ, ಪ್ರಕರಣದಲ್ಲಿ ಅಂತಿಮ ಶಿಕ್ಷೆ ವಿಧಿಸಿರುವ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ ಎಂದು ಅವರು ಪ್ರಶ್ನಿಸಿದರು.
ಈ ವರ್ಷದ ಮರುಪರೀಕ್ಷೆಗೆ ಸಂಬಂಧಿಸಿದಂತೆ, ಮೇ 3ರಂದು ಪರೀಕ್ಷೆ ಬರೆದಿದ್ದ ಸುಮಾರು 22 ಲಕ್ಷ ವಿದ್ಯಾರ್ಥಿಗಳ ಪೈಕಿ ಸುಮಾರು 20 ಲಕ್ಷ ವಿದ್ಯಾರ್ಥಿಗಳು ಮಾತ್ರ ಮರುಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ವರದಿಯಾಗಿದೆ. ಸುಮಾರು 2 ಲಕ್ಷ ವಿದ್ಯಾರ್ಥಿಗಳು ಮರುಪರೀಕ್ಷೆಯಲ್ಲಿ ಭಾಗವಹಿಸಿಲ್ಲ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಯುವ ಕಾಂಗ್ರೆಸ್ ಮುಖಂಡರಾದ ಪೃಥ್ವಿರಾಜ್, ರಿತೇಶ್, ಸಮರ್ಥ್ ಭಟ್ ಹಾಗೂ ತೌಫಿಕ್ ಉಪಸ್ಥಿತರಿದ್ದರು.

