ಮಂಗಳೂರು: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಪ್ರಕ್ರಿಯೆಯನ್ನು ಕಾರ್ಯಕರ್ತರ ಅಭಿಪ್ರಾಯದ ಆಧಾರದ ಮೇಲೆ ನಡೆಸುವ ಉದ್ದೇಶದಿಂದ ಎಐಸಿಸಿ, ಕೆಪಿಸಿಸಿ ಹಾಗೂ ರಾಜ್ಯ ಕಾಂಗ್ರೆಸ್ ವತಿಯಿಂದ ವೀಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ಬೆಳಗ್ಗೆ ವೀಕ್ಷಕರು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಆಗಮಿಸಿ ಸಭೆ ನಡೆಸಲಿದ್ದು, ಬಳಿಕ ಮಾಧ್ಯಮ ಗೋಷ್ಠಿ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದರು.
ನಂತರ ಸರ್ವಸದಸ್ಯರ ಸಭೆ ನಡೆಯಲಿದ್ದು, ಮಧ್ಯಾಹ್ನದ ಬಳಿಕ ಕಾಂಗ್ರೆಸ್‌ನ ಪ್ರಮುಖ ನಾಯಕರು ಹಾಗೂ ಮುಖಂಡರನ್ನು ವೈಯಕ್ತಿಕವಾಗಿ ಭೇಟಿ ಮಾಡಿ ಅಭಿಪ್ರಾಯ ಸಂಗ್ರಹಿಸಲಾಗುವುದು. ಸಂಜೆಯೊಳಗೆ ಅಧ್ಯಕ್ಷರ ಆಯ್ಕೆ ಸಂಬಂಧಿಸಿದ ಪ್ರಾಥಮಿಕ ತೀರ್ಮಾನಕ್ಕೆ ಬರಲಾಗುವುದು ಎಂದು ಹೇಳಿದರು.

ಹಾಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಐದು ವರ್ಷಗಳ ಅವಧಿ ಪೂರ್ಣಗೊಳಿಸಿದ್ದರೆ, ಅವರಿಗೆ ಮತ್ತೆ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ ಎಂದು ಹರೀಶ್ ಕುಮಾರ್ ಸ್ಪಷ್ಟಪಡಿಸಿದರು.

ಜುಲೈ 29ರಿಂದ ಆಗಸ್ಟ್ 12ರವರೆಗೆ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳು ಹಾಗೂ 16 ಬ್ಲಾಕ್ ಕಾಂಗ್ರೆಸ್ ಸಮಿತಿಗಳಿಗೆ ವೀಕ್ಷಕರು ಭೇಟಿ ನೀಡಲಿದ್ದಾರೆ. ಈ ವೇಳೆ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹಿಸಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಬಂದಿರುವ ಅರ್ಜಿಗಳನ್ನು ಪರಿಶೀಲಿಸಲಾಗುವುದು.
ಅರ್ಹ ಅಭ್ಯರ್ಥಿಗಳ ಪೈಕಿ 3ರಿಂದ 7 ಹೆಸರುಗಳನ್ನು ಶಿಫಾರಸು ಮಾಡಿ ವರದಿಯನ್ನು ಸಲ್ಲಿಸಲಾಗುವುದು. ಬಳಿಕ ಎಐಸಿಸಿ, ಕೆಪಿಸಿಸಿ ಹಾಗೂ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿ ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಲಾವಣ್ಯ ಬಳ್ಳಾಲ್, ಶುಭೋದಯ ಆಳ್ವ, ಸದಾಶಿವ ಉಳ್ಳಾಲ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

