ಮಂಗಳೂರು: ಜಲವು ಕೇವಲ ಪ್ರಕೃತಿಯ ಸಂಪನ್ಮೂಲವಲ್ಲ; ಮಾನವ ಜೀವನ, ಕೃಷಿ, ಪರಿಸರ ಹಾಗೂ ದೇಶದ ಸುಸ್ಥಿರ ಅಭಿವೃದ್ಧಿಗೆ ಆಧಾರವಾಗಿದ್ದು, ನೀರಿನ ಕೊರತೆ ದಿನದಿಂದ ದಿನಕ್ಕೆ ಗಂಭೀರ ಸಮಸ್ಯೆಯಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಜಲ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಬೇಕು ಎಂದು ಕಾಲೇಜು ಶಿಕ್ಷಣ ಇಲಾಖೆ ಮಂಗಳೂರು ವಿಭಾಗದ ಜಂಟಿ ನಿರ್ದೇಶಕಿ ಪ್ರೊ. ಕವಿತಾ ಕೆ.ಆರ್. ಹೇಳಿದರು.

ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ (ರಿ.) ಮಂಗಳೂರು ವಿಭಾಗ, ಮಂಗಳೂರು ರನ್ನರ್ಸ್ ಕ್ಲಬ್ ಹಾಗೂ ಮಿಲಾಗ್ರಿಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕದ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ‘ಜಲ ಸಂರಕ್ಷಣಾ ಜಾಗೃತಿ ಅಭಿಯಾನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿನ ವರ್ಷಗಳಲ್ಲಿ ಹವಾಮಾನ ವೈಪರೀತ್ಯ, ಅರಣ್ಯ ನಾಶ, ಮಳೆಯ ಏರಿಳಿತ, ಅಂತರ್ಜಲ ಮಟ್ಟದ ಕುಸಿತ ಹಾಗೂ ನೀರಿನ ದುರ್ಬಳಕೆಯಿಂದ ದೇಶದ ಹಲವು ಭಾಗಗಳು ತೀವ್ರ ಜಲ ಸಂಕಷ್ಟವನ್ನು ಎದುರಿಸುತ್ತಿವೆ. ಈ ಹಿನ್ನೆಲೆಯಲ್ಲಿ ಮಳೆನೀರು ಕೊಯ್ಲು, ಜಲಮೂಲಗಳ ಸಂರಕ್ಷಣೆ, ನೀರಿನ ಮಿತಬಳಕೆ ಹಾಗೂ ಪರಿಸರ ಸ್ನೇಹಿ ಜೀವನಶೈಲಿಯನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರು ರನ್ನರ್ಸ್ ಕ್ಲಬ್ ಅಧ್ಯಕ್ಷ ಹಾಗೂ ಕೆಎಂಸಿ ಆಸ್ಪತ್ರೆಯ ರೇಡಿಯೋಲಜಿ ವಿಭಾಗದ ಮುಖ್ಯಸ್ಥ ಡಾ. ಸಂತೋಷ್ ರೈ, ಜಲ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಶಿಕ್ಷಣ ಸಂಸ್ಥೆಗಳ ಪ್ರಮುಖ ಜವಾಬ್ದಾರಿಯಾಗಿದೆ. ಸಮಾಜದಲ್ಲಿ ಪರಿಸರ ಕಾಳಜಿಯನ್ನು ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಜಲ ಸಂರಕ್ಷಣೆಯ ರಾಯಭಾರಿಯಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿದ್ದ ಬಲ್ಮಠ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಜಗದೀಶ್ ಬಾಳ, ಜಲದ ಮಹತ್ವವನ್ನು ಅರಿಯದೆ ಅದರ ದುರ್ಬಳಕೆ ಮಾಡುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಪ್ರಕೃತಿಯೊಂದಿಗೆ ಸಮನ್ವಯ ಸಾಧಿಸುವ ಮೂಲಕವೇ ಮುಂದಿನ ಪೀಳಿಗೆಗೆ ಸುರಕ್ಷಿತ ಪರಿಸರ ನಿರ್ಮಿಸಲು ಸಾಧ್ಯವಾಗುತ್ತದೆ. ಜಲ ಸಂರಕ್ಷಣೆಯ ಅರಿವು ಕೇವಲ ಒಂದು ದಿನದ ಕಾರ್ಯಕ್ರಮಕ್ಕೆ ಸೀಮಿತವಾಗದೆ ಜೀವನದ ಭಾಗವಾಗಬೇಕು ಎಂದು ತಿಳಿಸಿದರು.
ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ಡಾ. ಆಲ್ವಿನ್ ಸೆರಾವೊ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘದ ಮಂಗಳೂರು ವಿಭಾಗದ ಮಹಿಳಾ ಪ್ರಮುಖ್ ಪ್ರೊ. ಸುಭಾಷಿಣಿ ಶ್ರೀವತ್ಸ, ಮಂಗಳೂರು ರನ್ನರ್ಸ್ ಕ್ಲಬ್ ಸದಸ್ಯ ಚಂದ್ರಶೇಖರ ಶೆಟ್ಟಿ ಹಾಗೂ ಸಂಘದ ರಾಜ್ಯ ಜಂಟಿ ಪ್ರಧಾನ ಕಾರ್ಯದರ್ಶಿ ಡಾ. ಮಾಧವ ಎಂ.ಕೆ. ಉಪಸ್ಥಿತರಿದ್ದರು.

ಎನ್ಎಸ್ಎಸ್ ಸಂಯೋಜನಾಧಿಕಾರಿ ಜಾಯೆಲ್ ಮಸ್ಕರೇನಸ್ ಸ್ವಾಗತಿಸಿದರು. ಉಪನ್ಯಾಸಕಿ ಮಮತಾ ಶೆಟ್ಟಿ ಪ್ರಸ್ತಾವನೆಗೈದರು. ವಿದ್ಯಾರ್ಥಿನಿ ವನ್ಯ ವಂದಿಸಿದರು. ಕೃತಿ ಕಾರ್ಯಕ್ರಮ ನಿರೂಪಿಸಿದರು.

