ಸುರತ್ಕಲ್: ತಳಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿ ಬಲಪಡಿಸುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ‘ಸಂಘಟನ್ ಸೃಜನ್ ಅಭಿಯಾನ’ದ ಮೂಲಕ ಪಾರದರ್ಶಕ ಹೆಜ್ಜೆ ಇಟ್ಟಿದೆ ಎಂದು ಎಐಸಿಸಿ ವೀಕ್ಷಕರೂ, ಕೇರಳದ ಶಾಸಕರೂ ಆದ ಜಯಂತ್ ಹೇಳಿದರು.
ಸುರತ್ಕಲ್‌ನ ಚೊಕ್ಕಬೆಟ್ಟು ಕ್ರಾಸ್‌ನಲ್ಲಿ ‘ಸಂಘಟನ್ ಸೃಜನ್ ಅಭಿಯಾನ’ದ ಅಂಗವಾಗಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, 2013ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ದಾಖಲಿಸಿದ್ದ ಯಶಸ್ಸನ್ನು ಪುನರಾವರ್ತಿಸುವ ಗುರಿ ಹೊಂದಲಾಗಿದೆ ಎಂದರು.

ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳು, ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್‌ಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಾದರೆ ತಳಮಟ್ಟದ ಸಂಘಟನೆ ಬಲಿಷ್ಠವಾಗಿರಬೇಕು. ಸ್ಥಳೀಯ ಘಟಕಗಳ ಅಧ್ಯಕ್ಷರಾಗಿ ಸಮರ್ಥ ಹಾಗೂ ಕ್ರಿಯಾಶೀಲ ನಾಯಕರನ್ನು ಆಯ್ಕೆ ಮಾಡುವ ಮೂಲಕ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸುವ ಕೆಲಸ ನಡೆಯುತ್ತಿದೆ. ಈ ನಿಟ್ಟಿನಲ್ಲಿ ‘ಸಂಘಟನ್ ಸೃಜನ್ ಅಭಿಯಾನ’ ಮಹತ್ವದ ಪಾತ್ರ ವಹಿಸಲಿದೆ ಎಂದು ಹೇಳಿದರು.

ಬಿಜೆಪಿ ಜನವಿರೋಧಿ ನೀತಿಗಳಿಂದ ಜನರ ವಿಶ್ವಾಸ ಕಳೆದುಕೊಳ್ಳುತ್ತಿದೆ. ದೆಹಲಿಯಲ್ಲಿ ನಡೆದ ವಿದ್ಯಾರ್ಥಿಗಳ ಬೃಹತ್ ರ್ಯಾಲಿಯೇ ಇದಕ್ಕೆ ಸಾಕ್ಷಿಯಾಗಿದೆ. ಕಾಂಗ್ರೆಸ್ ಮುಕ್ತ ಭಾರತದ ಕನಸು ಕಂಡಿದ್ದ ಬಿಜೆಪಿ ಇಂದು ತನ್ನದೇ ರಾಜಕೀಯ ಹಿನ್ನಡೆಯನ್ನು ಎದುರಿಸುತ್ತಿದ್ದು, ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯ ಪರಿಣಾಮ ಈಗ ದೇಶಾದ್ಯಂತ ಗೋಚರಿಸುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಸಚಿವ ಜಯಪ್ರಕಾಶ್ ಹೆಗ್ಡೆ, ಸಮಿತಿ ಸದಸ್ಯ ಸತೀಶ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಸದಾಶಿವ, ವೆರೋನಿಕ ಕರ್ನೇಲಿಯೋ, ಯುವ ಕಾಂಗ್ರೆಸ್ ಮುಖಂಡ ನವಾಝ್, ಮಾಜಿ ಕಾರ್ಪೊರೇಟರ್ ಅನಿಲ್ ಕುಮಾರ್, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ್ ಚಿತ್ರಾಪುರ ಸೇರಿದಂತೆ ಕಾಂಗ್ರೆಸ್‌ನ ವಿವಿಧ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.


