2018ರ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ ತಲಾ 20 ವರ್ಷ ಕಠಿಣ ಜೈಲು: ಒಟ್ಟು ₹74 ಸಾವಿರ ದಂಡ ವಿಧಿಸಿದ ಮಂಗಳೂರು ನ್ಯಾಯಾಲಯ

ಮಂಗಳೂರು, ಜು. 31: 2018ರಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ನಾಲ್ವರು ಆರೋಪಿಗಳಿಗೆ ತಲಾ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಒಟ್ಟು ₹74 ಸಾವಿರ ದಂಡ ವಿಧಿಸಿದೆ.

ಶಿಕ್ಷೆಗೆ ಗುರಿಯಾದವರನ್ನು ಪ್ರಜ್ವಲ್ (33), ಅರುಣ್ ಅಮೀನ್ (34), ಆದಿತ್ಯ ಸಾಲ್ಯಾನ್ (28) ಹಾಗೂ ಅಬ್ದುಲ್ ರಿಯಾಜ್ (40) ಎಂದು ಗುರುತಿಸಲಾಗಿದೆ.

2018ರ ನವೆಂಬರ್ 18ರಂದು ಯುವತಿಯೊಬ್ಬಳು ತನ್ನ ಗೆಳೆಯನೊಂದಿಗೆ ಬೀಚ್‌ಗೆ ತೆರಳಿದ್ದ ಸಂದರ್ಭದಲ್ಲಿ, ಮೂವರು ಅಪ್ರಾಪ್ತ ವಯಸ್ಸಿನ ಬಾಲಕರು ಸೇರಿದಂತೆ ಒಟ್ಟು ಏಳು ಮಂದಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು ಎಂದು ಆರೋಪಿಸಲಾಗಿತ್ತು. ಈ ಕುರಿತು ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಯನ್ನು ಅಂದಿನ ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕಿ ಕಲಾವತಿ ಕೆ. ಹಾಗೂ ಎಸಿಪಿ ಮಂಜುನಾಥ ಶೆಟ್ಟಿ ನಡೆಸಿದ್ದರು. ಬಳಿಕ ಅಂದಿನ ಎಸಿಪಿ ಶ್ರೀನಿವಾಸ ಗೌಡ ಆರ್. ಅವರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಜಗದೀಶ ವಿ.ಎನ್. ಅವರು ಆರೋಪಿಗಳ ವಿರುದ್ಧದ ಆರೋಪಗಳು ಸಾಬೀತಾಗಿವೆ ಎಂದು ತೀರ್ಮಾನಿಸಿ, ನಾಲ್ವರು ಆರೋಪಿಗಳಿಗೆ ತಲಾ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ಪ್ರಕಟಿಸಿದರು.

ಅಭಿಯೋಜನೆ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ಸಾಕ್ಷಿಗಳ ವಿಚಾರಣೆ ನಡೆಸಿ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.

ಇದೇ ಪ್ರಕರಣದಲ್ಲಿ ಆರೋಪಿಗಳಾಗಿರುವ ಮೂವರು ಅಪ್ರಾಪ್ತ ವಯಸ್ಸಿನ ಬಾಲಕರ ವಿರುದ್ಧದ ವಿಚಾರಣೆ ಬಾಲ ನ್ಯಾಯ ಮಂಡಳಿಯಲ್ಲಿ ಮುಂದುವರಿದಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!