ಮಂಗಳೂರು: ಸಹಕಾರ ರಂಗದ ಪಿತಾಮಹ ಕೀರ್ತಿಶೇಷ ಮೊಳಹಳ್ಳಿ ಶಿವರಾವ್ ಅವರ ಜೀವನ, ತ್ಯಾಗ ಮತ್ತು ಸಮಾಜಮುಖಿ ಸೇವೆಯನ್ನು ದಾಖಲಿಸಿರುವ ‘ತ್ಯಾಗಮಯಿ ಮೊಳಹಳ್ಳಿ’ ಕೃತಿಯನ್ನು ಆಗಸ್ಟ್ 3ರಂದು ಬೆಳಿಗ್ಗೆ 11.30ಕ್ಕೆ ಮಂಗಳೂರಿನ ಎಸ್ಸಿಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಬಿಡುಗಡೆ ಮಾಡಲಾಗುತ್ತದೆ.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಕೃತಿಯನ್ನು ಬಿಡುಗಡೆಗೊಳಿಸಲಿದ್ದಾರೆ.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಜನರ ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಅಭಿವೃದ್ಧಿಗೆ ಸಹಕಾರದ ಮೂಲಕ ತಮ್ಮ ಬದುಕನ್ನೇ ಸಮರ್ಪಿಸಿದ ಮೊಳಹಳ್ಳಿ ಶಿವರಾವ್ ಅವರ ಸಾಧನೆ ಮತ್ತು ಸೇವೆಯನ್ನು ಕೃತಿ ಒಳಗೊಂಡಿದೆ.
ಎಸ್ಸಿಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯ ಕಿರಿಯ ನಿರೀಕ್ಷಕರೂ, ಸುಮಾರು 35 ವರ್ಷಗಳಿಂದ ಕ್ರೀಡಾ ಪತ್ರಿಕೋದ್ಯಮದಲ್ಲಿ ಗುರುತಿಸಿಕೊಂಡಿರುವ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ಪೇಟೆ ಅವರು ಈ ಕೃತಿಯನ್ನು ರಚಿಸಿದ್ದಾರೆ.

