ಮಂಗಳೂರು, ಆ. 5: ನಗರದ ಕಾಲೇಜೊಂದರ ಪ್ರಥಮ ವರ್ಷದ ಇಬ್ಬರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದ್ದು, ಪ್ರಾಥಮಿಕ ತನಿಖೆಯಲ್ಲಿ ಇದು ರ್ಯಾಗಿಂಗ್ ಪ್ರಕರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ನಗರದ ಗುಜ್ಜರಕೆರೆಯ ಚಹಾ ಅಂಗಡಿಯ ಸಮೀಪ ಈ ಘಟನೆ ನಡೆದಿದ್ದು, ಗಾಯಗೊಂಡ ಇಬ್ಬರು ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಾಥಮಿಕ ಮಾಹಿತಿಯಂತೆ, ಅದೇ ಕಾಲೇಜಿನ ದ್ವಿತೀಯ ವರ್ಷದ ನಾಲ್ಕರಿಂದ ಆರು ವಿದ್ಯಾರ್ಥಿಗಳು ಪ್ರಥಮ ವರ್ಷದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಮೇಲ್ನೋಟಕ್ಕೆ ಇದು ರ್ಯಾಗಿಂಗ್ ಪ್ರಕರಣದಂತೆ ಕಂಡುಬರುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಸಂಬಂಧ ಮಂಗಳೂರು ನಗರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಗಾಯಗೊಂಡ ವಿದ್ಯಾರ್ಥಿಗಳ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಳ್ಳುತ್ತಿದ್ದಾರೆ.
ಪ್ರಕರಣದ ಸಮಗ್ರ ತನಿಖೆ ನಡೆಯುತ್ತಿದ್ದು, ತನಿಖೆ ಪೂರ್ಣಗೊಂಡ ಬಳಿಕವಷ್ಟೇ ಘಟನೆಯ ಸತ್ಯಾಸತ್ಯತೆ ಸ್ಪಷ್ಟವಾಗಲಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.


