ಮಂಗಳೂರು:ಕುಂದಾಪುರ ಮೂಲದವರು ವೃತ್ತಿ ನಿಮಿತ್ತ ಮಂಗಳೂರಿನಲ್ಲಿ ನೆಲೆಸಿದ್ದರೂ ತಮ್ಮ ಭಾಷೆ, ಸಂಸ್ಕೃತಿ, ಆಚರಣೆ ಹಾಗೂ ಸಂಪ್ರದಾಯವನ್ನು ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಕುಡ್ಲದಗಿಪ್ಪ ಕುಂದಾಪ್ರದರ್ ವಾಟ್ಸಪ್ ಬಳಗದ ಆಶ್ರಯದಲ್ಲಿ ‘ವಿಶ್ವ ಕುಂದಾಪ್ರ ದಿನಾಚರಣೆ’ ಹಾಗೂ ‘ಕುಂದಾಪ್ರ ಕನ್ನಡ ಹಬ್ಬ–2026’ ಅನ್ನು ಆಗಸ್ಟ್ 9ರಂದು ಮಂಗಳೂರಿನ ಉರ್ವಸ್ಟೋರ್ನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ ಎಂದು ಆಯೋಜನಾ ಸಮಿತಿಯ ಅಧ್ಯಕ್ಷೆ ಮಾಲತಿ ಎಸ್. ಶೆಟ್ಟಿ ತಿಳಿಸಿದರು.

ನಗರದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 7.30ರಿಂದ ರಾತ್ರಿ 8.30ರವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಕುಂದಾಪುರದ ಭಾಷೆ, ಸಂಸ್ಕೃತಿ, ಆಚಾರ–ವಿಚಾರ ಹಾಗೂ ಅಸ್ಮಿತೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ವಿವಿಧ ಸಾಂಸ್ಕೃತಿಕ, ಕ್ರೀಡಾ ಹಾಗೂ ಆರೋಗ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಬೆಳಿಗ್ಗೆ 7.30ರಿಂದ ಮಧ್ಯಾಹ್ನ 12.30ರವರೆಗೆ ವಾಮಂಜೂರಿನ ಕಾಯ ಹೆಲ್ತ್ಕೇರ್ ಡಯಾಗ್ನೋಸಿಸ್ ಆ್ಯಂಡ್ ಕ್ಲಿನಿಕ್ ವತಿಯಿಂದ ಉಚಿತ ರಕ್ತ ತಪಾಸಣಾ ಶಿಬಿರ ಹಾಗೂ ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿಯ ಎನ್ಎಸ್ಎಸ್ ಘಟಕದ ವತಿಯಿಂದ ವೈದ್ಯ ಡಾ. ಅವಿನ್ ಆಳ್ವ ಅವರ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ.

ಬೆಳಿಗ್ಗೆ 8.45ಕ್ಕೆ ಧ್ವಜಾರೋಹಣದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದ್ದು, ಪಾಂಡೇಶ್ವರ ದಕ್ಷಿಣ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವೇಂದ್ರ ಎಂ. ಬೈಂದೂರು ಗ್ರಾಮೀಣ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ಗೇರುಬೀಜ ಗುರಿ ಇಡುವುದು, ಚಮಚ–ಲಿಂಬೆ ಓಟ, ಮಡಲು ನೇಯುವ ಸ್ಪರ್ಧೆ, ತಲೆಯ ಮೇಲೆ ಲೋಟ ಇಟ್ಟು ಓಟ, ಒಂಟಿಕಾಲಿನ ಓಟ, ರಂಗೋಲಿ ಸ್ಪರ್ಧೆ, ಬಲೂನು ಜೋಡಿ ಆಟ ಹಾಗೂ ಗೋಲಿ ಗುರಿ ಇಡುವುದು ಸೇರಿದಂತೆ ವಿವಿಧ ಗ್ರಾಮೀಣ ಕ್ರೀಡೆಗಳು ನಡೆಯಲಿವೆ.

ಸಂಜೆ 4 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮಕ್ಕೆ ಆಯೋಜನಾ ಸಮಿತಿಯ ಅಧ್ಯಕ್ಷೆ ಮಾಲತಿ ಸಂತೋಷ್ ಶೆಟ್ಟಿ ಬಾರ್ಕೂರು ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಸದಸ್ಯ ಕೆ. ಜಯಪ್ರಕಾಶ್ ಹೆಗ್ಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ದಿಕ್ಕೂಚಿ ಭಾಷಣ ಮಾಡಲಿದ್ದು, ಕರ್ನಾಟಕ ಸರ್ಕಾರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ನಿವೃತ್ತ ಹಣಕಾಸು ನಿರ್ದೇಶಕ ಶಾನಾಡಿ ಅಜಿತ್ ಕುಮಾರ ಹೆಗ್ಡೆ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.
ಕುಡ್ಲ ಕುಂದಾಪುರ ಫೌಂಡೇಶನ್ನ ಗೌರವಾಧ್ಯಕ್ಷ ಜಿ.ಕೆ. ಗೋಪಾಲಕೃಷ್ಣ ಶೆಟ್ಟಿ ಹಾಗೂ ಕಾರ್ಯದರ್ಶಿ ಶರತ ಆಚಾರ್ಯ ಯಡ್ತಾಡಿ ಉಪಸ್ಥಿತರಿರುವರು.

ಈ ಸಂದರ್ಭದಲ್ಲಿ ಪ್ರಸಿದ್ಧ ಅಂಕಣಕಾರ ಚೇರ್ಕಾಡಿ ಸಚ್ಚಿದಾನಂದ ಶೆಟ್ಟಿ ಹಾಗೂ ಮಂಗಳೂರು ನಗರದ ದಕ್ಷಿಣ ಉಪವಿಭಾಗ ಕಚೇರಿಯ ಸಹಾಯಕ ಪೊಲೀಸ್ ಉಪನಿರೀಕ್ಷಕ ಸುಜನ್ ಶೆಟ್ಟಿ ಅವರನ್ನು ಸನ್ಮಾನಿಸಲಾಗುವುದು. ಎಸ್ಎಸ್ಎಲ್ಸಿ, ಪಿಯುಸಿ ಹಾಗೂ ಪದವಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಗುವುದು.

ಕಾರ್ಯಕ್ರಮದಲ್ಲಿ ಕುಡ್ಲದಗಿಪ್ಪ ಕುಂದಾಪ್ರದರ್ ವಾಟ್ಸಪ್ ಬಳಗದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಮನರಂಜನಾ ಕಾರ್ಯಕ್ರಮಗಳು ನಡೆಯಲಿದ್ದು, ದಿನಪೂರ್ತಿ ಕುಂದಾಪುರದ ಸಾಂಪ್ರದಾಯಿಕ ತಿಂಡಿ–ತಿನಿಸುಗಳ ವ್ಯವಸ್ಥೆ ಮಾಡಲಾಗಿದೆ. ಮಂಗಳೂರಿನ ಜನತೆ ಹಾಗೂ ಮಂಗಳೂರಿನಲ್ಲಿ ನೆಲೆಸಿರುವ ಕುಂದಾಪುರ ಮೂಲದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಶರತ ಆಚಾರ್ಯ, ನವೀನ್ ಶೆಟ್ಟಿ, ಸಂತೋಷ್ ಶೆಟ್ಟಿ ಹಾಗೂ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

