ಮಂಗಳೂರು:
ವಿಟ್ಲ ಸಮೀಪದ ಸುರಿಕುಮೇರು ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ಗುರುವಾರ ಸಂಜೆ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಗಾಯಗೊಂಡ ಘಟನೆ ನಡೆದಿದೆ.

ಮಂಗಳೂರಿನಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಇಬ್ಬರು ದೊಡ್ಡವರು ಹಾಗೂ ನಾಲ್ವರು ಮಕ್ಕಳು ಪ್ರಯಾಣಿಸುತ್ತಿದ್ದರು. ಈ ವೇಳೆ ಸುರಿಕುಮೇರು ಸಮೀಪದ ಹೆದ್ದಾರಿಯಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಕಾಮಗಾರಿ ಹಾಗೂ ರಸ್ತೆಯ ಅಸಮರ್ಪಕ ವ್ಯವಸ್ಥೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ ಕ್ಕೀಡಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಅಪಘಾತದಲ್ಲಿ ಕಾರಿನಲ್ಲಿದ್ದ ಎಲ್ಲ ಆರು ಮಂದಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳದಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಸ್ಥಳೀಯರ ಪ್ರಕಾರ, ಸುರಿಕುಮೇರು ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ 75ರ ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿರುವ ಕಾರಣ ಈ ಹಿಂದೆ ಕೂಡ ಅನೇಕ ಅಪಘಾತಗಳು ಸಂಭವಿಸಿವೆ. ಸಮರ್ಪಕ ಸೂಚನಾ ಫಲಕಗಳು, ಸುರಕ್ಷತಾ ಕ್ರಮಗಳು ಹಾಗೂ ವೈಜ್ಞಾನಿಕ ರೀತಿಯ ರಸ್ತೆ ಕಾಮಗಾರಿ ಇಲ್ಲದಿರುವುದು ಅಪಘಾತಗಳಿಗೆ ಪ್ರಮುಖ ಕಾರಣವಾಗಿದೆ ಎಂದು ಆರೋಪಿಸಿದ್ದಾರೆ.

