ಆ.16ರಂದು ಮಂಗಳೂರಿನಲ್ಲಿ ಬಿಸಿಎಫ್ ವಿದ್ಯಾರ್ಥಿವೇತನ ವಿತರಣೆ

ಮಂಗಳೂರು:ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ದುಬೈನ ಬ್ಯಾರೀಸ್ ಕಲ್ಚರಲ್ ಫೋರಂ (ಬಿಸಿಎಫ್) ವತಿಯಿಂದ ಕಳೆದ 25 ವರ್ಷಗಳಿಂದ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಈ ಸಾಲಿನಲ್ಲಿ ಪಿಯುಸಿಯಿಂದ ಸ್ನಾತಕೋತ್ತರ ಪದವಿವರೆಗೆ ವ್ಯಾಸಂಗ ಮಾಡುತ್ತಿರುವ 300ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸುವ ಕಾರ್ಯಕ್ರಮ ಆಗಸ್ಟ್ 16ರಂದು ಮಂಗಳೂರಿನ ಟೌನ್‌ಹಾಲ್‌ನಲ್ಲಿ ನಡೆಯಲಿದೆ ಎಂದು ಬಿಸಿಎಫ್ ಅಧ್ಯಕ್ಷ ಡಾ. ಬಿ.ಕೆ. ಯೂಸುಫ್ ತಿಳಿಸಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ಸಂದರ್ಭದಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಸುಮಾರು 100 ಮಹಿಳೆಯರಿಗೆ ಸ್ವ-ಉದ್ಯೋಗ ಕೈಗೊಳ್ಳಲು ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಲಾಗುವುದು ಎಂದರು.

ಬೆಳಗ್ಗೆ 10 ಗಂಟೆಗೆ ವ್ಯಕ್ತಿತ್ವ ವಿಕಸನ ಶಿಬಿರ ನಡೆಯಲಿದ್ದು, ಯುಎಇ ಲಂಡನ್ ಅಮೇರಿಕನ್ ಸಿಟಿ ಕಾಲೇಜಿನ ನಿರ್ದೇಶಕರಾದ ಡಾ. ಪ್ರೊ. ಕಾಪು ಮೊಹಮ್ಮದ್ ಹಾಗೂ ಮನಾಲ್ ಕಾಪು ಶಿಬಿರ ನಡೆಸಿಕೊಡಲಿದ್ದಾರೆ.

ಕರ್ನಾಟಕ ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಬಿಸಿಎಫ್ ಅಧ್ಯಕ್ಷ ಡಾ. ಬಿ.ಕೆ. ಯೂಸುಫ್ ಅಧ್ಯಕ್ಷತೆ ವಹಿಸಲಿದ್ದಾರೆ. ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಮದರಸಾ ಸಾರ್ವಜನಿಕ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.

ಪತ್ರಿಕಾಗೋಷ್ಠಿಯಲ್ಲಿ ಬಿಸಿಎಫ್ ವಿದ್ಯಾರ್ಥಿವೇತನ ಸಮಿತಿ ಅಧ್ಯಕ್ಷ ಎಂ.ಇ. ಮೂಳೂರು, ಪ್ರಧಾನ ಕಾರ್ಯದರ್ಶಿ ಡಾ. ಕಾಪು ಮೊಹಮ್ಮದ್, ಸಲಹೆಗಾರ ಅಬೂಸಾಲಿಹ್, ಉಪಾಧ್ಯಕ್ಷ ಅಬ್ದುಲ್ ರಹಮಾನ್, ಸಮಿತಿ ಸದಸ್ಯ ಯಾಕೂಬ್ ದೇವ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!