ಆ.20ರಂದು ಮಂಗಳೂರಿನಲ್ಲಿ ಕೊಂಕಣಿ ಮಾನ್ಯತಾ ದಿವಸ್ ಆಚರಣೆ

ಮಂಗಳೂರು:ಯುವಜನತೆಯಲ್ಲಿ ಕೊಂಕಣಿ ಭಾಷೆ ಹಾಗೂ ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಕೊಂಕಣಿ ಮಾನ್ಯತಾ ದಿವಸದ ಅಂಗವಾಗಿ ಆ.20ರಂದು ಬೆಳಗ್ಗೆ 9ಕ್ಕೆ ವಿಶ್ವ ಕೊಂಕಣಿ ಕೇಂದ್ರದಲ್ಲಿ ಕೊಂಕಣಿ ಮಾನ್ಯತಾ ದಿವಸ್ ಆಚರಣೆ ಹಾಗೂ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಕೊಂಕಣಿ ಭಾಷೆ ಮತ್ತು ಸಂಸ್ಕೃತಿ ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಡಾ. ಕಸ್ತೂರಿ ಮೋಹನ್ ಪೈ ತಿಳಿಸಿದ್ದಾರೆ.

ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರಿನ ಸುತ್ತಮುತ್ತಲಿನ ಪ್ರೌಢಶಾಲೆಗಳ 6ರಿಂದ 10ನೇ ತರಗತಿಯ ವಿದ್ಯಾರ್ಥಿಗಳನ್ನು ಒಳಗೊಂಡ 10 ತಂಡಗಳನ್ನು ಈಗಾಗಲೇ ವಿಶ್ವ ಕೊಂಕಣಿ ಕೇಂದ್ರಕ್ಕೆ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಕೊಂಕಣಿ ಭಾಷೆಯಲ್ಲೇ ವಿವಿಧ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಲಿದ್ದಾರೆ ಎಂದರು.

ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆಯುವ ತಂಡಗಳಿಗೆ ಕ್ರಮವಾಗಿ ₹5 ಸಾವಿರ, ₹3 ಸಾವಿರ ಹಾಗೂ ₹2 ಸಾವಿರ ನಗದು ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕಾರ್ಕಳದ ಎಸ್‌ಟಿ ಶಾಲೆಯಲ್ಲಿ 6ರಿಂದ 10ನೇ ತರಗತಿಯವರೆಗೆ ತೃತೀಯ ಭಾಷೆಯಾಗಿ ಕೊಂಕಣಿ ಕಲಿತು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 100 ಅಂಕಗಳನ್ನು ಗಳಿಸಿದ ವಿದ್ಯಾರ್ಥಿನಿ ಕೌಸಲ್ಯಾ ಅವರಿಗೆ ವಿಶೇಷ ಬಹುಮಾನ ನೀಡಿ ಗೌರವಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಕೊಂಕಣಿ ವಾಚನ ಸಂಘದ ಸದಸ್ಯರಿಂದ ಕೊಂಕಣಿ ಅಭಿಮಾನ ಗೀತೆ ಗಾಯನ ನಡೆಯಲಿದ್ದು, ಅಶೋಕ ನಾಯಕ್ ವಿರಚಿತ ಹಾಗೂ ನಿರ್ದೇಶನದ ‘ಅಂತರಧ್ವನಿ’ ನಾಟಕವನ್ನು ಪ್ರದರ್ಶಿಸಲಾಗುವುದು ಎಂದು ಡಾ. ಕಸ್ತೂರಿ ಮೋಹನ್ ಪೈ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಪ್ರತಿಷ್ಠಾನದ ಉಪಾಧ್ಯಕ್ಷ ರಮೇಶ್ ನಾಯಕ್, ಎಂ.ಆರ್. ಕಾಮತ್, ಕವಿ ಮೆಲ್ವಿನ್ ರೊಡ್ರಿಗಸ್ ಹಾಗೂ ಗೌರವ ಖಜಾಂಚಿ ಬಿ.ಆರ್. ಭಟ್ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!