ಪುತ್ತೂರು: ಹಿಂದೂ ಜಾಗರಣ ವೇದಿಕೆ ವತಿಯಿಂದ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಅವರು ಪುತ್ತೂರಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.

ಜಿಲ್ಲೆಯಲ್ಲಿ ಇಂದು ಈದ್ ಮಿಲಾದ್ ಆಚರಣೆ ನಡೆಯುತ್ತಿದ್ದು, ಜಿಲ್ಲೆಯಾದ್ಯಂತ ಈದ್ ಮಿಲಾದ್ ಮೆರವಣಿಗೆಗಳು ಶಾಂತಿಯುತವಾಗಿ ನಡೆದಿವೆ. ಪುತ್ತೂರು ನಗರದಲ್ಲೂ ಬೆಳಗ್ಗೆ ಈದ್ ಮಿಲಾದ್ ಮೆರವಣಿಗೆ ಯಾವುದೇ ಅಹಿತಕರ ಘಟನೆಗಳಿಲ್ಲದೆ ಶಾಂತಿಯುತವಾಗಿ ನಡೆದಿದೆ.

ಬಂದ್ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ಪುತ್ತೂರು ನಗರದಲ್ಲಿ ಹೆಚ್ಚಿನ ಪೊಲೀಸ್ ತುಕಡಿಗಳನ್ನು ನಿಯೋಜಿಸಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಸದ್ಯ ಪುತ್ತೂರಿನ ಪರಿಸ್ಥಿತಿ ಸಂಪೂರ್ಣ ಶಾಂತವಾಗಿದ್ದು, ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ ಎಂದು ಎಸ್ಪಿ ಅರುಣ್ ಕುಮಾರ್ ತಿಳಿಸಿದ್ದಾರೆ.

ಪುತ್ತೂರಿನಲ್ಲಿ ಯಾವುದೇ ಒತ್ತಾಯಪೂರ್ವಕ ಬಂದ್ ನಡೆದಿಲ್ಲ. ಹಿಂದೂ ಜಾಗರಣ ವೇದಿಕೆ ಸ್ವಯಂಪ್ರೇರಿತ ಬಂದ್‌ಗೆ ಕರೆ ನೀಡಿದ್ದು, ಕೆಲವರು ಅದಕ್ಕೆ ಬೆಂಬಲವಾಗಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿದ್ದಾರೆ. ಇದನ್ನು ಸಹಜ ರಜಾ ದಿನದ ರೀತಿಯಲ್ಲೇ ಕಾಣಬಹುದು ಎಂದು ಅವರು ಹೇಳಿದ್ದಾರೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಉಲ್ಲಂಘನೆ ಕಂಡುಬಂದಲ್ಲಿ ನಿಯಮಾನುಸಾರ ಬಂಧನ ಮಾಡಲಾಗುವುದು. ಕೆಲವು ಪ್ರಕರಣಗಳಲ್ಲಿ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುವುದು. ಪೊಲೀಸರು ಎಲ್ಲರನ್ನೂ ಒಂದೇ ರೀತಿಯಲ್ಲಿ ನೋಡುತ್ತಿದ್ದು, ಯಾವುದೇ ರೀತಿಯ ತಾರತಮ್ಯ ಮಾಡುವುದಿಲ್ಲ ಎಂದು ಎಸ್ಪಿ ಅರುಣ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

