ಮಂಗಳೂರು: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ಬಜಾಲ್–ನಂತೂರು ನಿವಾಸಿ, 34 ವರ್ಷದ ಮಹಮ್ಮದ್ ನೌಫಲ್ ಅಲಿಯಾಸ್ ಸಫಾರಿ ನೌಫಲ್ ಬಂಧಿತ ಆರೋಪಿ.
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ. 24/2020ರ ಪ್ರಕರಣದಲ್ಲಿ ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಆರೋಪಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

ಸೆಪ್ಟೆಂಬರ್ 15ರಂದು ವಿದೇಶದಿಂದ ಮಂಗಳೂರಿಗೆ ಹಿಂದಿರುಗುತ್ತಿದ್ದ ವೇಳೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇಮಿಗ್ರೇಷನ್ ವಿಭಾಗದ ಸಹಾಯದಿಂದ ಬಂಟ್ವಾಳ ನಗರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ದಸ್ತಗಿರಿ ಮಾಡಿದ್ದಾರೆ.
ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಸೆಪ್ಟೆಂಬರ್ 29ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

