ಪರಿಶಿಷ್ಟ ಜಾತಿ ಪಟ್ಟಿಗೆ ‘ಮನ್ಸ’ ಸೇರ್ಪಡೆಗೆ ಆಗ್ರಹ

ಮಂಗಳೂರು: ‘ಮನ್ಸ’ ಜಾತಿಯ ಹೆಸರನ್ನು ಸರ್ಕಾರದ ಪರಿಶಿಷ್ಟ ಜಾತಿಗಳ ಪಟ್ಟಿಗೆ ಸೇರ್ಪಡೆಗೊಳಿಸಿ, ಸೆ.18ರಂದು ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತುಳುನಾಡ್‌ ಮನ್ಸ ಸಮಾಜ ಸೇವಾ ಸಂಘ ಆಗ್ರಹಿಸಿದೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಗೌರವ ಸಲಹೆಗಾರ ಅಚ್ಯುತ ಸಂಪಿಗೆ, ‘ಮನ್ಸ’ ಸಮುದಾಯದ ಮೂಲ ದಕ್ಷಿಣ ಕನ್ನಡ ಜಿಲ್ಲೆಯಾಗಿದ್ದು, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಹಾಗೂ ಕೇರಳದ ಕಾಸರಗೋಡು ಜಿಲ್ಲೆಗಳಲ್ಲಿಯೂ ಸಮುದಾಯದವರು ನೆಲೆಸಿದ್ದಾರೆ. ಸಂಘದ ಅಂದಾಜಿನಂತೆ ಸಮುದಾಯದ ಜನಸಂಖ್ಯೆ 5 ಲಕ್ಷಕ್ಕೂ ಅಧಿಕವಿದ್ದು, ಇಷ್ಟೊಂದು ದೊಡ್ಡ ಸಂಖ್ಯೆಯ ಸಮುದಾಯದ ಹೆಸರನ್ನು ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಪ್ರತ್ಯೇಕವಾಗಿ ಸೇರ್ಪಡೆಗೊಳಿಸದಿರುವುದು ಬೇಸರದ ಸಂಗತಿ ಎಂದರು.

‘ಮನ್ಸ’ ಜಾತಿಯ ಹೆಸರು ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಇಲ್ಲದ ಕಾರಣ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ‘ಆದಿದ್ರಾವಿಡ’, ಮಲೆನಾಡು ಜಿಲ್ಲೆಗಳಲ್ಲಿ ‘ಆದಿಕರ್ನಾಟಕ’ ಎಂಬ ಹೆಸರಿನಲ್ಲಿ ಜಾತಿ ಪ್ರಮಾಣಪತ್ರ ಪಡೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಶೈಕ್ಷಣಿಕ, ಔದ್ಯೋಗಿಕ, ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಸಮುದಾಯ ಹಿಂದುಳಿದಿದ್ದು, ಮೂಲಜಾತಿ ಹೆಸರನ್ನೇ ಪರಿಶಿಷ್ಟ ಜಾತಿಗಳ ಪಟ್ಟಿಗೆ ಸೇರ್ಪಡೆಗೊಳಿಸುವಂತೆ ಹಲವು ವರ್ಷಗಳಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತಿದೆ ಎಂದು ಹೇಳಿದರು.

ಒಳಮೀಸಲಾತಿ ಜಾರಿ ಪ್ರಕ್ರಿಯೆಯಲ್ಲಿಯೂ ‘ಮನ್ಸ’ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂದು ಅವರು ಆರೋಪಿಸಿದರು. ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಸೇರ್ಪಡೆಯಾಗದ ಅಸ್ಪೃಶ್ಯ ಜಾತಿಗಳನ್ನು ನಿಯಮಾನುಸಾರ ಪಟ್ಟಿಗೆ ಸೇರಿಸಿ ಸೂಕ್ತ ಪ್ರಾತಿನಿಧ್ಯ ಕಲ್ಪಿಸುವ ಕ್ರಮ ಕೈಗೊಳ್ಳಬೇಕು ಎಂದು ಸಂಘ ಒತ್ತಾಯಿಸಿದೆ ಎಂದರು.

‘ಮನ್ಸ’ ಜಾತಿಯ ಕುಲಶಾಸ್ತ್ರೀಯ ಅಧ್ಯಯನ ನಡೆಸಲು ಕಡತ ಸಿದ್ಧವಾಗಿದ್ದರೂ, ಸಂಬಂಧಿಸಿದ ಆದೇಶಕ್ಕೆ ಸಹಿ ಆಗದೆ ಪ್ರಕ್ರಿಯೆ ವಿಳಂಬವಾಗಿದೆ. ಈ ಹಿನ್ನೆಲೆಯಲ್ಲಿ ಸೆ.18ರ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಂಡು ‘ಮನ್ಸ’ ಜಾತಿಯನ್ನು ಪರಿಶಿಷ್ಟ ಜಾತಿಗಳ ಪಟ್ಟಿಗೆ ಸೇರ್ಪಡೆಗೊಳಿಸಬೇಕು ಎಂದು ಆಗ್ರಹಿಸಿದರು.

ಸಂಘದ ಗೌರವಾಧ್ಯಕ್ಷ ಎಂ. ಶಾಂತಾರಾಮ್‌, ಅಧ್ಯಕ್ಷ ವೆಂಕಣ್ಣ ಕೊಯ್ಯೂರು, ಉಪಾಧ್ಯಕ್ಷ ಹರಿಯಪ್ಪ ಮುತ್ತೂರು, ಪ್ರಧಾನ ಕಾರ್ಯದರ್ಶಿ ಉದಯ ಗೋಳಿಯಂಗಡಿ ಹಾಗೂ ಸಂಘಟನಾ ಕಾರ್ಯದರ್ಶಿ ಎಂ. ರಮೇಶ್‌ ಬೋಧಿ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!