ಮಂಗಳೂರು:ಮಂಗಳೂರಿನಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಿಂದ ಮಹತ್ವದ ಮೈಲಿಗಲ್ಲಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಡಾ. ಮಂಜುನಾಥ ಭಂಡಾರಿ ಹೇಳಿದರು.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿಯ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಮೂಲಸೌಕರ್ಯ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಹಲವು ಪ್ರಸ್ತಾವನೆಗಳನ್ನು ಸರ್ಕಾರದ ಮುಂದಿಡಲಾಗಿದೆ. ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಕಳೆದ 15 ದಿನಗಳಿಂದ ವಿವಿಧ ಇಲಾಖೆಗಳ ಅಧಿಕಾರಿಗಳು ಜಿಲ್ಲೆಯ ಅಗತ್ಯಗಳ ಕುರಿತು ಪ್ರಸ್ತಾವನೆ ಹಾಗೂ ಯೋಜನಾ ವರದಿಗಳನ್ನು ಸಿದ್ಧಪಡಿಸುತ್ತಿದ್ದಾರೆ ಎಂದರು.

ಕರಾವಳಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಪ್ರವಾಸೋದ್ಯಮ ಮತ್ತು ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ 100ರಿಂದ 150 ಎಕರೆ ಜಾಗ ಗುರುತಿಸಿ ಸ್ಟಾರ್ ಹೋಟೆಲ್ ಹಾಗೂ ಅಂತಾರಾಷ್ಟ್ರೀಯ ಕನ್ವೆನ್ಶನ್ ಸೆಂಟರ್‌ನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಪ್ರಸ್ತಾವನೆ ಸಲ್ಲಿಸಲಾಗಿದೆ. ತಲಪಾಡಿಯಿಂದ ಬೈಂದೂರುವರೆಗೆ ಕರಾವಳಿ ಭಾಗದಲ್ಲಿ ರಸ್ತೆ ಅಭಿವೃದ್ಧಿಪಡಿಸುವ ಬಗ್ಗೆಯೂ ಪ್ರಸ್ತಾವನೆ ನೀಡಲಾಗಿದ್ದು, ಈ ಕುರಿತು ವರದಿ ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಬೆಳಪುವಿನಲ್ಲಿ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸುವ ಪ್ರಸ್ತಾವನೆಯನ್ನೂ ಸರ್ಕಾರದ ಮುಂದಿಡಲಾಗಿದೆ. ಈಗಿರುವ ಜಾಗವನ್ನು ಬಳಸಿಕೊಂಡು ಕ್ರೀಡಾ ಶಿಕ್ಷಣ, ಕೌಶಲ್ಯ ತರಬೇತಿ ಹಾಗೂ ಉದ್ಯೋಗಾವಕಾಶಗಳಿಗೆ ಪೂರಕವಾದ ವ್ಯವಸ್ಥೆ ರೂಪಿಸುವ ಉದ್ದೇಶವಿದೆ. ಈ ಕುರಿತು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ಬೆಳಪುವಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಲಿದ್ದಾರೆ ಎಂದರು.
ಮಂಗಳೂರಿನ ಮೀನುಗಾರಿಕಾ ಕಾಲೇಜನ್ನು ಸ್ವಾಯತ್ತ ಸಂಸ್ಥೆಯಾಗಿ ಮೇಲ್ದರ್ಜೆಗೇರಿಸುವುದು ಅಥವಾ ಪ್ರತ್ಯೇಕ ಮೀನುಗಾರಿಕಾ ವಿಶ್ವವಿದ್ಯಾಲಯ ಸ್ಥಾಪಿಸುವ ಕುರಿತೂ ಪ್ರಸ್ತಾವನೆ ಸಲ್ಲಿಸಲಾಗಿದೆ. ಮಂಗಳೂರಿನ ಅಭಿವೃದ್ಧಿ ಹಾಗೂ ಕರಾವಳಿಯ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡುವುದರ ಜೊತೆಗೆ ಯುವಕರಿಗೆ ಉದ್ಯೋಗ ಸೃಷ್ಟಿಸುವುದು ಸರ್ಕಾರದ ಪ್ರಮುಖ ಉದ್ದೇಶವಾಗಬೇಕು ಎಂದು ಭಂಡಾರಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ , ಕಾಂಗ್ರೆಸ್ ಪಕ್ಷದ ಪ್ರಮುಖರಾದ ಹರೀಶ್ ಕುಮಾರ್, ಮಮತಾ ಗಟ್ಟಿ ಸಹಿತ ಮತ್ತಿತರರು ಉಪಸ್ಥಿತರಿದ್ದರು.

