“ಬಿಜೆಪಿ ಧಾರ್ಮಿಕ ಭಾವನೆಗಳನ್ನು ಕೇರಳಿಸುವುದು ಬಿಟ್ಟು ಅಭಿವೃದ್ಧಿಗೆ ಸಹಕರಿಸಲಿ ಟಿ ಎಂ ಶಾಹಿದ್ ತೆಕ್ಕಿಲ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತುಳುವಿಗೆ ಎರಡನೇ ಹೆಚ್ಚುವರಿ ಆಡಳಿತ ಭಾಷೆ ಸ್ಥಾನಮಾನ ನೀಡಿರುವುದು ಹಾಗೂ ಕರಾವಳಿ ಭಾಗದ ಅಭಿವೃದ್ಧಿಗೆ ಹಲವು ಯೋಜನೆಗಳಿಗೆ ಅನುಮೋದನೆ ನೀಡಿರುವುದು ಸ್ವಾಗತಾರ್ಹ ಎಂದು ಕರ್ನಾಟಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಹೀದ್ ತೆಕ್ಕಿಲ್ ಹೇಳಿದರು.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ವಿರೋಧ ಪಕ್ಷಗಳು ರಚನಾತ್ಮಕ ಸಲಹೆಗಳನ್ನು ನೀಡಬೇಕು. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ ವಿರೋಧ ಪಕ್ಷದವರು ಬಳಿಕ ಇತರ ರಾಜ್ಯಗಳಲ್ಲೂ ಇದೇ ಮಾದರಿಯ ಯೋಜನೆಗಳನ್ನು ಅಳವಡಿಸಿಕೊಂಡಿದ್ದಾರೆ ಎಂದು ಹೇಳಿದರು.

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಜಿಎಸ್‌ಟಿ ಪಾಲು ಹಾಗೂ ಗ್ರಾಮ ಪಂಚಾಯಿತಿಗಳಿಗೆ ನೀಡಬೇಕಾದ ಅನುದಾನ ಸೇರಿದಂತೆ ವಿವಿಧ ವಿಚಾರಗಳಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದ ಅವರು, ಈ ಬಗ್ಗೆ ರಾಜ್ಯದ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದರು. ಬಿಜೆಪಿ ನಾಯಕರು ಧಾರ್ಮಿಕ ವಿಚಾರಗಳಿಗೆ ಹೆಚ್ಚು ಒತ್ತು ನೀಡಿ ಭಾವನಾತ್ಮಕ ವಿಚಾರಗಳ ಮೂಲಕ ರಾಜಕೀಯ ನಡೆಸುವುದನ್ನು ಬಿಟ್ಟು ಅಭಿವೃದ್ಧಿ ವಿಚಾರಗಳಿಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.

ರಾಜ್ಯದಲ್ಲಿ ಕಾರ್ಮಿಕರ ಕನಿಷ್ಠ ವೇತನ ಪರಿಷ್ಕರಣೆಗೆ ಸರ್ಕಾರ ಕ್ರಮ ಕೈಗೊಂಡಿದ್ದು, ತಾಲೂಕು ಮಟ್ಟದಲ್ಲಿ ₹19 ಸಾವಿರ, ಜಿಲ್ಲಾ ಮಟ್ಟದಲ್ಲಿ ₹21 ಸಾವಿರ ಹಾಗೂ ಬೆಂಗಳೂರು ಕೇಂದ್ರ ಸ್ಥಾನದಲ್ಲಿ ₹23 ಸಾವಿರ ಕನಿಷ್ಠ ವೇತನ ನಿಗದಿಪಡಿಸುವ ಪ್ರಕ್ರಿಯೆ ನಡೆದಿದೆ. ಆದರೆ ಕೆಲವರು ನ್ಯಾಯಾಲಯದ ಮೊರೆ ಹೋಗಿ ತಡೆಯಾಜ್ಞೆ ತಂದಿದ್ದಾರೆ ಎಂದು ತಿಳಿಸಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕಾರ್ಮಿಕರ ಪರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಸಚಿವ ಸಂಪುಟ ಸಭೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ತುಳು ಭಾಷೆಗೆ ಎರಡನೇ ಹೆಚ್ಚುವರಿ ಆಡಳಿತ ಭಾಷೆ ಸ್ಥಾನಮಾನ ನೀಡುವುದರ ಜತೆಗೆ ಒಟ್ಟು ₹32,611 ಕೋಟಿ ಮೊತ್ತದ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಅನುಮೋದನೆ ದೊರೆತಿದೆ. ಇದರಲ್ಲಿ ಸುಮಾರು ₹16 ಸಾವಿರ ಕೋಟಿ ಗ್ರಾಮೀಣ ಅಭಿವೃದ್ಧಿ ಹಾಗೂ ಮೂಲಸೌಕರ್ಯಕ್ಕೆ ಸಂಬಂಧಿಸಿದ ಯೋಜನೆಗಳಿಗೆ ಮೀಸಲಾಗಿದೆ ಎಂದು ಶಹೀದ್ ತೆಕ್ಕಿಲ್ ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಆರ್‌ಪಿಎಲ್, ವಿಮಾನ ನಿಲ್ದಾಣ ಹಾಗೂ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರಗಳು ಜಾರಿಗೆ ತಂದಿವೆ ಎಂದು ಹೇಳಿದ ಅವರು, ಬಿಜೆಪಿಯವರು ಅವುಗಳನ್ನು ಮಾರಾಟ ಮಾಡಿದ ಕೀರ್ತಿ ಮಾತ್ರ ಪಡೆದುಕೊಂಡಿದ್ದಾರೆ ಎಂದು ಟೀಕಿಸಿದರು. ಡಿ.ವಿ. ಸದಾನಂದ ಗೌಡ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲೂ ಜಿಲ್ಲೆಗೆ ಅಗತ್ಯವಾದ ಅಭಿವೃದ್ಧಿ ಕಾರ್ಯಗಳು ನಡೆಯಲಿಲ್ಲ ಎಂದು ಆರೋಪಿಸಿದ ಅವರು, ಜಿಲ್ಲೆಯಲ್ಲಿದ್ದ ಹಲವು ಕೇಂದ್ರ ಸಚಿವರು ಹಾಗೂ ಬಿಜೆಪಿ ನಾಯಕರೂ ಅಭಿವೃದ್ಧಿಪರವಾಗಿ ಕೆಲಸ ಮಾಡಿಲ್ಲ ಎಂದು ದೂರಿದರು.

ಡಿ.ವಿ. ಸದಾನಂದ ಗೌಡ ಅವರು ಮುಖ್ಯಮಂತ್ರಿಯಾಗಿದ್ದರೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಚಿವ ಸಂಪುಟ ಸಭೆ ನಡೆಸಲು ಸಾಧ್ಯವಾಗಲಿಲ್ಲ. ಆದರೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಿ ಜಿಲ್ಲೆಯ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಮಂಜೂರು ಮಾಡಿಸಿದ್ದಾರೆ. ಇದು ಕಾಂಗ್ರೆಸ್‌ನ ಅಭಿವೃದ್ಧಿಪರ ಇಚ್ಛಾಶಕ್ತಿಯನ್ನು ತೋರಿಸುತ್ತದೆ ಎಂದು ಶಹೀದ್ ತೆಕ್ಕಿಲ್ ಹೇಳಿದರು.

ಜಿಲ್ಲೆಯಲ್ಲಿ ಬಿಜೆಪಿಯವರು ಮಾಡಿರುವ ಅಭಿವೃದ್ಧಿ ಕಾರ್ಯಗಳ ಕೊಡುಗೆಯನ್ನು ತೋರಿಸಲಿ ಎಂದು ಸವಾಲು ಹಾಕಿದ ಅವರು, ಅಭಿವೃದ್ಧಿಗಿಂತ ಕೋಮು ಭಾವನೆಗಳನ್ನು ಕೆರಳಿಸಿ ಮತ ಪಡೆಯುವ ರಾಜಕೀಯಕ್ಕೆ ಬಿಜೆಪಿ ಒತ್ತು ನೀಡುತ್ತಿದೆ ಎಂದು ಆರೋಪಿಸಿದರು. ಸುಳ್ಯದಲ್ಲಿ ಕೆಐಎಡಿಬಿ ಮೂಲಕ ಕೈಗಾರಿಕಾ ಘಟಕಗಳನ್ನು ಸ್ಥಾಪಿಸಿ ಕೈಗಾರಿಕಾ ಅಭಿವೃದ್ಧಿಗೆ ಉತ್ತೇಜನ ನೀಡಬೇಕು. ಇದರಿಂದ ಸ್ಥಳೀಯವಾಗಿ ಉದ್ಯೋಗಾವಕಾಶಗಳು ಸೃಷ್ಟಿಯಾಗಿ ಕಾರ್ಮಿಕರಿಗೂ ಅನುಕೂಲವಾಗಲಿದೆ ಎಂದು ಅವರು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಪಕ್ಷದ ಪ್ರಮುಖರಾದ ಸುರೇಶ್ ಅಮೈ, ರಾಮಯ್ಯ, ರಕ್ಷಿತ್ ಗೂನಡ್ಕ, ರಾಧಾಕೃಷ್ಣ, ನಾಸಿರ್ ಸಾಮಾನಿಗೆ ಹಾಗೂ ಹೇಮನಾಥ್ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!