ಮಂಗಳೂರು: ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕಂಬಳ ಆಯೋಜಿಸುವ ಕುರಿತು ಸರ್ಕಾರವೇ ನಿರ್ಧಾರ ಕೈಗೊಂಡಿದ್ದು, ಕಂಬಳವು ಕರಾವಳಿಯ ಸಾಂಸ್ಕೃತಿಕ ಕ್ರೀಡೆಯಾಗಿರುವುದರಿಂದ ದಸರಾ ಉತ್ಸವದಲ್ಲಿ ಆಯೋಜಿಸುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಪುತ್ತೂರು ಶಾಸಕ ಹಾಗೂ ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ಹೇಳಿದ್ದಾರೆ.

ದಸರಾ ಸರ್ಕಾರದ ವತಿಯಿಂದ ಆಯೋಜಿಸಲಾಗುವ ನಾಡಹಬ್ಬವಾಗಿದ್ದು, ಕಾರ್ಯಕ್ರಮದ ರೂಪುರೇಷೆ ಕುರಿತು ಸರ್ಕಾರ ನಿರ್ಧಾರ ಕೈಗೊಳ್ಳುತ್ತದೆ. ಪ್ರತಿಯೊಂದು ಕಾರ್ಯಕ್ರಮದಲ್ಲೂ ಸಾಧಕ-ಬಾಧಕಗಳು ಇರುತ್ತವೆ. ಮೈಸೂರು ದಸರಾ ಸಂದರ್ಭದಲ್ಲಿ ಯುವ ಕಂಬಳ, ಯುವ ದಸರಾ ಸೇರಿದಂತೆ ಹಲವು ಹೊಸ ಕಾರ್ಯಕ್ರಮಗಳು ನಡೆಯುತ್ತಿವೆ. ವಾರದ ಅವಧಿಯಲ್ಲಿ ಸುಮಾರು ಏಳು ಲಕ್ಷ ಮಂದಿ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ ಎಂದು ಅವರು ತಿಳಿಸಿದರು.

ದಸರಾ ವೇಳೆ ಏರ್ಶೋ ಹಾಗೂ ಪಾಶ್ಚಾತ್ಯ ಸಂಗೀತ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನೂ ಆಯೋಜಿಸಲಾಗುತ್ತಿದೆ. ಕಂಬಳವು ತುಳುನಾಡಿನ ಸಂಸ್ಕೃತಿ ಮತ್ತು ಪರಂಪರೆಯೊಂದಿಗೆ ನಂಟು ಹೊಂದಿರುವ ಸಾಂಸ್ಕೃತಿಕ ಕ್ರೀಡೆಯಾಗಿದ್ದು, ಮೈಸೂರು ದಸರಾ ಮೂಲಕ ಅದನ್ನು ಇನ್ನಷ್ಟು ಜನರಿಗೆ ಪರಿಚಯಿಸುವ ಅವಕಾಶ ದೊರೆತಿದೆ ಎಂದು ಅಶೋಕ್ ರೈ ಹೇಳಿದರು.

ಮೈಸೂರಿನಲ್ಲಿ ಕಂಬಳ ಆಯೋಜಿಸುವಂತೆ ಹಲವು ಮಂದಿ ಆಸಕ್ತಿ ವ್ಯಕ್ತಪಡಿಸುತ್ತಿದ್ದು, ಯಾವಾಗ ಕಂಬಳ ನಡೆಯಲಿದೆ ಎಂದು ವಿಚಾರಿಸುತ್ತಿದ್ದಾರೆ. ಸರ್ಕಾರ ಈ ಕುರಿತು ನಿರ್ಧಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ದಸರಾ ಮಹೋತ್ಸವದಲ್ಲಿ ಕಂಬಳವನ್ನು ಆಯೋಜಿಸಲಾಗುತ್ತಿದೆ ಎಂದು ಅವರು ಹೇಳಿದರು.

