ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಪದ್ಮರಾಜ್ ಆರ್ ಪೂಜಾರಿ

ಮಂಗಳೂರು: ಚುನಾವಣಾ ಆಯೋಗದ ಕ್ರಮಗಳ ಕುರಿತು ಗಂಭೀರ ಪ್ರಶ್ನೆಗಳು ಮೂಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸೆ.28ರಂದು ಮಂಗಳೂರಿನಲ್ಲಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ತಿಳಿಸಿದರು.

ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಒಬ್ಬ ವ್ಯಕ್ತಿ, ಒಂದು ಮತ’ ಎಂಬುದು ಪ್ರಜಾಪ್ರಭುತ್ವದ ಸಮಾನತೆಯ ತತ್ವವಾಗಿದ್ದು, ಅದನ್ನು ರಕ್ಷಿಸುವ ಜವಾಬ್ದಾರಿ ಚುನಾವಣಾ ಆಯೋಗದ್ದಾಗಿದೆ. ಆದರೆ ಆಯೋಗದ ಕೆಲವು ಕ್ರಮಗಳು ಅದರ ವಿಶ್ವಾಸಾರ್ಹತೆ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿವೆ ಎಂದು ಆರೋಪಿಸಿದರು. ಪ್ರಸ್ತುತ ಚುನಾವಣಾ ಆಯೋಗದಲ್ಲಿ ಜ್ಞಾನೇಶ್ ಕುಮಾರ್ ಮುಖ್ಯ ಚುನಾವಣಾ ಆಯುಕ್ತರಾಗಿದ್ದು, ಸುಖಬೀರ್ ಸಿಂಗ್ ಸಂಧು ಹಾಗೂ ವಿವೇಕ್ ಜೋಶಿ ಚುನಾವಣಾ ಆಯುಕ್ತರಾಗಿದ್ದಾರೆ.

ವಿಪಕ್ಷ ನಾಯಕ ರಾಹುಲ್ ಗಾಂಧಿ ಈ ಹಿಂದೆ ಮತದಾನ ಪ್ರಕ್ರಿಯೆ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದ ಹಲವು ಆರೋಪಗಳನ್ನು ಪ್ರಸ್ತಾಪಿಸಿದ್ದರು. ಮಹಾರಾಷ್ಟ್ರ ಚುನಾವಣೆ ಹಾಗೂ ಕರ್ನಾಟಕದ ಮಹದೇವಪುರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅವರು ಪ್ರಶ್ನೆಗಳನ್ನು ಎತ್ತಿದ್ದರು. ಇದೀಗ ಚುನಾವಣಾ ಆಯೋಗದ ಆಂತರಿಕ ಆಕ್ಷೇಪಣೆಗಳ ಕುರಿತ ಹೇಳಿಕೆಗಳು ಹೊರಬಂದಿರುವ ಹಿನ್ನೆಲೆಯಲ್ಲಿ ಈ ವಿಚಾರ ಮತ್ತಷ್ಟು ಚರ್ಚೆಗೆ ಬಂದಿದೆ ಎಂದು ಪದ್ಮರಾಜ್ ಹೇಳಿದರು.

ಕಾಂಗ್ರೆಸ್‌ನ ರಾಷ್ಟ್ರೀಯ ಹಾಗೂ ಕೆಪಿಸಿಸಿ ಸೂಚನೆಯಂತೆ ಸೆ.28ರಂದು ಬೆಳಿಗ್ಗೆ 10.30ಕ್ಕೆ ಮಂಗಳೂರಿನ ಮಹಾವೀರ ಸರ್ಕಲ್ (ಪಂಪ್‌ವೆಲ್)ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಪಕ್ಷದ ಮುಖಂಡರು, ಜನಪ್ರತಿನಿಧಿಗಳು, ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರು ರಾಜೀನಾಮೆ ನೀಡಬೇಕು ಹಾಗೂ ಆಯೋಗದ ವಿರುದ್ಧದ ಆರೋಪಗಳ ಕುರಿತು ತನಿಖೆ ನಡೆಸಬೇಕು ಎಂಬುದು ಕಾಂಗ್ರೆಸ್‌ನ ಆಗ್ರಹವಾಗಿದೆ. ಚುನಾವಣಾ ಪ್ರಕ್ರಿಯೆಯ ವಿಶ್ವಾಸಾರ್ಹತೆಯನ್ನು ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರು ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ಪದ್ಮರಾಜ್ ಪೂಜಾರಿ ಕರೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಜಿಲ್ಲಾ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಪ್ಪಿ, ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಅನಿಲ್ ಕುಮಾರ್, ಮೋಹನ್ ಕೋಟ್ಯಾನ್ ಹಾಗೂ ಶುಭೋದಯ ಆಳ್ವ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!