ಕರಾವಳಿಗೆ ₹32 ಸಾವಿರ ಕೋಟಿ ಅನುದಾನ ಘೋಷಣೆ ಕೇವಲ ಬಿಟ್ಟಿ ಪ್ರಚಾರ: ವೇದವ್ಯಾಸ ಕಾಮತ್

ಮಂಗಳೂರು: ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ಈಗಾಗಲೇ ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆಗಳಿಗೇ ಅನುದಾನದ ಕೊರತೆಯಿದೆ. ಇಂತಹ ಸಂದರ್ಭದಲ್ಲಿ ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರಾವಳಿಗೆ ₹32 ಸಾವಿರ ಕೋಟಿಗೂ ಅಧಿಕ ಅನುದಾನ ಘೋಷಿಸಿರುವುದು ಕೇವಲ ಪ್ರಚಾರಕ್ಕಾಗಿ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಆರೋಪಿಸಿದರು.

ನಗರದ ಅಟಲ್ ಸೇವಾ ಕೇಂದ್ರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗುತ್ತಿಗೆದಾರರಿಗೆ ₹36 ಸಾವಿರ ಕೋಟಿಗೂ ಅಧಿಕ ಬಾಕಿ ಇರುವುದಾಗಿ ಆರ್ಥಿಕ ಇಲಾಖೆ ತಿಳಿಸಿದ್ದರೂ ಹೊಸ ಯೋಜನೆಗಳನ್ನು ಘೋಷಿಸಲಾಗಿದೆ. ಮೀನುಗಾರಿಕೆಗೆ ಸಂಬಂಧಿಸಿದ ಸೀ ಅಂಬುಲೆನ್ಸ್, ಡ್ರೆಜ್ಜಿಂಗ್ ಮಿಷನ್ ಸೇರಿದಂತೆ ಬಜೆಟ್‌ನಲ್ಲಿ ಘೋಷಿಸಿದ್ದ ಹಲವು ಯೋಜನೆಗಳು ಇನ್ನೂ ಜಾರಿಯಾಗಿಲ್ಲ ಎಂದು ದೂರಿದರು.

ಮಂಗಳೂರು ಮಹಾನಗರ ಪಾಲಿಕೆಗೆ ಎಸ್‌ಎಫ್‌ಸಿ ಅನುದಾನ ಸ್ಥಗಿತಗೊಂಡಿದ್ದು, ಸಿಬ್ಬಂದಿ ವೇತನಕ್ಕೂ ಪಾಲಿಕೆಯೇ ಹಣ ಹೊಂದಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಪಾಲಿಕೆ ಚುನಾವಣೆ ನಡೆಸದೆ ಸರ್ಕಾರ ನಗರದ ಜನರಿಗೆ ಅನ್ಯಾಯ ಮಾಡುತ್ತಿದೆ ಎಂದರು. ಎಡಿಬಿ ಸಾಲದ ಬಾಕಿ ₹1,375 ಕೋಟಿಗೂ ಅಧಿಕವಾಗಿದ್ದು, ಈ ಬಗ್ಗೆಯೂ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು.

ವೆನ್ಲಾಕ್ ಆಸ್ಪತ್ರೆಯಲ್ಲಿ ಐಸಿಯು ಮಾತ್ರವಲ್ಲದೆ ಸಾಮಾನ್ಯ ಬೆಡ್‌ಗಳೂ ಲಭ್ಯವಿಲ್ಲ ಎಂಬ ದೂರುಗಳು ಕೇಳಿಬರುತ್ತಿವೆ. ಕೋವಿಡ್‌ ಅವಧಿಯಲ್ಲಿ 115ಕ್ಕೂ ಅಧಿಕ ಐಸಿಯು ಹಾಗೂ 250ಕ್ಕೂ ಹೆಚ್ಚು ಆಕ್ಸಿಜನ್ ಬೆಡ್‌ಗಳನ್ನು ಸಜ್ಜುಗೊಳಿಸಲಾಗಿತ್ತು. ಇದೀಗ ಇಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ಸರ್ಕಾರದ ಆರೋಗ್ಯ ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸಾಕ್ಷಿ ಎಂದು ವೇದವ್ಯಾಸ ಕಾಮತ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಪ್ರಮುಖರಾದ ದಿವಾಕರ್‌ ಪಾಂಡೇಶ್ವರ್‌ , ಲಲ್ಲೇಶ್ ಕುಮಾರ್, ರಮೇಶ್ ಹೆಗ್ಡೆ, ಪೂರ್ಣಿಮಾ, ಭಾನುಮತಿ ಹಾಗೂ ಪ್ರವೀಣ್ ಸಹಿತ ಮತ್ತಿತರರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!