MRPLನಲ್ಲಿ ಭಾರೀ ಸ್ಫೋಟ: ಎಂಟು ಮಂದಿ ಗಾಯ; ಓರ್ವನಿಗೆ ಶೇ.35ರಷ್ಟು ಸುಟ್ಟ ಗಾಯ

ಮಂಗಳೂರು, ಸೆ.30: ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ (MRPL)ನಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭಾರೀ ಸ್ಫೋಟದಲ್ಲಿ ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಮಧ್ಯಾಹ್ನ 12.15ರ ಸುಮಾರಿಗೆ MRPLನ ಕೋಕರ್ ಹೈಡ್ರೋ ಟ್ರೀಟಿಂಗ್ ಯುನಿಟ್‌ (CHTU)ನಲ್ಲಿ ಸ್ಫೋಟ ಸಂಭವಿಸಿ ಬೆಂಕಿ ಕಾಣಿಸಿಕೊಂಡಿದೆ. ಘಟಕದಲ್ಲಿದ್ದ ಇಬ್ಬರು ಗಾಯಗೊಂಡಿದ್ದು, ರಾಜೇಶ್ ಬ್ಯಾಪ್ಟಿಸ್ಟ್ ಎಂಬವರಿಗೆ ಶೇ.35ರಷ್ಟು ಸುಟ್ಟ ಗಾಯಗಳಾಗಿವೆ. ಅವರನ್ನು ಚಿಕಿತ್ಸೆಗಾಗಿ ಶ್ರೀನಿವಾಸ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಸದ್ಯ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಸ್ಫೋಟ ಸಂಭವಿಸಿದ ಘಟಕದ ಪಕ್ಕದ ಕಚೇರಿಯಲ್ಲಿದ್ದ ಆರು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಘಟನಾ ಸ್ಥಳದಲ್ಲಿ ಕಾಣಿಸಿಕೊಂಡಿದ್ದ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಪೊಲೀಸ್‌ ಆಯುಕ್ತರು ತಿಳಿಸಿದ್ದಾರೆ.

ಸದ್ಯದ ಮಾಹಿತಿಯಂತೆ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಯಾರೂ ಇರಲಿಲ್ಲ ಹಾಗೂ ಯಾವುದೇ ಮಹಿಳಾ ಸಿಬ್ಬಂದಿಗೆ ಗಾಯಗಳಾಗಿಲ್ಲ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಪೊಲೀಸ್‌ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹಾಗೂ ಜಿಲ್ಲಾ ಪಂಚಾಯತ್‌ ಸಿಇಒ ನರ್ವಡೆ ವಿನಾಯಕ್ ಕಾರ್ಭಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!